ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದ ಕೃನಾಲ್ ಪಾಂಡ್ಯ ತಮ್ಮ ಚೊಚ್ಚಲ ಇನ್ನಿಂಗ್ಸ್ನಲ್ಲೇ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಎಡಗೈ ದಾಂಡಿಗ ಇಂಗ್ಲೆಂಡ್ ಬೌಲರುಗಳನ್ನು ಬೆಂಡೆತ್ತಿದರು. 31 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 7 ಬೌಂಡರಿಗಳೊಂದಿಗೆ ಅಜೇಯ 58 ರನ್ ಬಾರಿಸಿದ ಕೃನಾಲ್ ಪಾಂಡ್ಯ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಭರ್ಜರಿ ಇನಿಂಗ್ಸ್ನೊಂದಿಗೆ ಸೀನಿಯರ್ ಪಾಂಡ್ಯ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ತಮ್ಮ ಮೊದಲ ಏಕದಿನ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಕೃನಾಲ್ 26 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಚೊಚ್ಚಲ ಏಕದಿನ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ 20 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದರು.
1990 ರಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್‌ನ ಜಾನ್ ಮೋರಿಸ್ 35 ಎಸೆತಗಳಲ್ಲಿ ಅರ್ಧಶತಕ ಸಿಡಿಸಿರುವುದು ಚೊಚ್ಚಲ ಏಕದಿನ ಪಂದ್ಯದ ವೇಗದ ಹಾಫ್ ಸೆಂಚುರಿಯಾಗಿತ್ತು. ಇದೀಗ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಈ ದಾಖಲೆಯನ್ನು ಕೃನಾಲ್ ಪಾಂಡ್ಯ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅಲ್ಲದೆ 2012ರ ಬಳಿಕ ಭಾರತದ ಪರ ಅತೀ ವೇಗದ ಏಕದಿನ ಅರ್ಧಶತಕ ಬಾರಿಸಿದ ಹೆಗ್ಗಳಿಕೆಗೂ ಎಡಗೈ ಪಾಂಡ್ಯ ಪಾತ್ರರಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ