Bengaluru: ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್; KSRTCಯಿಂದ 600 ಹೆಚ್ಚುವರಿ ಬಸ್ ವ್ಯವಸ್ಥೆ

ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮಾ.26): ಯುಗಾದಿ (Ugadi) ಹಬ್ಬದ (Festival) ಹಿನ್ನೆಲೆ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆ ವಿಶೇಷ ಬಸ್​ಗಳ (Special buses) ವ್ಯವಸ್ಥೆ ಮಾಡಿದೆ. KRSTC ಮಹತ್ವದ ಕ್ರಮ ಕೈಗೊಂಡಿದ್ದು, ಸುಮಾರು 600 ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಈ ಮೂಲಕ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್​ (Ticket Booking) ಸೌಲಭ್ಯ ಕಲ್ಪಿಸಲಾಗಿದೆ.

ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್

ದಿನಾಂಕ: 02.04.2022ರಂದು ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 01.04.2022 ಹಾಗೂ 02.04.2022 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.04.2022ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಯುಗಾದಿ ಪ್ರಯುಕ್ತ ಹೆಚ್ಚುವರಿ ಬಸ್​ಗಳ ಸಂಚಾರ

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ಇದನ್ನೂ ಓದಿ: Wings India Award: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಂಗ್ಸ್ ಇಂಡಿಯಾ 2022 ಪ್ರಶಸ್ತಿ ಪ್ರದಾನ

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್ ವ್ಯವಸ್ಥೆ

ಇ-ಟಿಕೆಟ್ ಬುಕಿಂಗ್​ www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಬುಕ್ಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು.

ಇದನ್ನೂ ಓದಿ: Bengaluru: ಜಿಮ್​ನಲ್ಲಿ ವರ್ಕೌಟ್ ಮಾಡ್ತಿದ್ದ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್​ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
Published by:Pavana HS
First published: