ಬೆಂಗಳೂರು (ಫೆ. 5): ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದೇ ಫೆಬ್ರವರಿ ಅಂತ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು. ಕೋವಿಡ್ ಹಿನ್ನಲೆ ಈ ಸಮ್ಮೇಳನವನ್ನು ಮುಂದೂಡಲಾಗಿದೆ. ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ನಡೆಸಲಾಗಿದೆ. ಸಮ್ಮೇಳನದಲ್ಲಿ ಹೆಚ್ಚಿನ ಜನ ಸೇರುವುದರಿಂದ ಕೋವಿಡ್ ನಿಯಮ ಪಾಲನೆ ಕಷ್ಟವಾಗಲಿದೆ. ಈ ಹಿನ್ನಲೆಯಲ್ಲಿ ಫೆಬ್ರವರಿ ಅಂತ್ಯದಲ್ಲಿ ನಡೆಯಬೇಕಿದ್ದ ಸಮ್ಮೇಳನವನ್ನು ಮುಂದೂಡಲಾಗಿದೆ. ಮಾರ್ಚ್ 9ಕ್ಕೆ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ದಿನಾಂಕ ನಿಗದಿಗೊಳಿಸಲಾಗುವುದು. ಇದೇ ವೇಳೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದೇ ಫೆ. 26 ರಿಂದ 28ರವರೆಗೆ ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಈ ಸಮ್ಮೇಳನ ಅಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ದೊಡ್ಡ ರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿತ್ತು.
ಇದನ್ನು ಓದಿ: ಲಿಂಗಾಯತ ಮೀಸಲಾತಿ: ಗೆಜೆಟ್ ನೋಟಿಫಿಕೇಷನ್ ಹೊರಡಿಸುವವರೆಗೂ ಹೋರಾಟ: ಜಯಮೃತ್ಯುಂಜಯ ಶ್ರೀ
ಕೊರೋನಾ ಸೋಂಕಿನ ಆತಂಕದ ಹಿನ್ನಲೆ ಕನ್ನಡ ಸಾಹಿತ್ಯ ಸಮ್ಮೇಳ ಜರುಗುವುದು ಬಹುತೇಕ ಅನುಮಾನ ಎಂಬ ಮಾತುಗಳು ಈ ಹಿಂದೆಯೇ ವ್ಯಕ್ತವಾಗಿದ್ದವು. ಇದೇ ಹಿನ್ನಲೆ ಸರ್ಕಾರ ಸಮ್ಮೇಳನಕ್ಕೆ ಇನ್ನು ಅನುದಾನ ಮಂಜೂರು ಮಾಡಿರಲಿಲ್ಲ. ಈ ಕುರಿತು ಮಾತನಾಡಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಸಮ್ಮೇಳನಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಆದರೆ, ಸರ್ಕಾರದಿಂದ ಅನುದಾನ ಸಿಕ್ಕಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಜೊತೆಗೆ ಕೊರೋನಾ ನಿಯಮಗಳ ಸಡಿಲಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದಿದ್ದರು.
ಇದೀಗ ಸಮ್ಮೇಳನವನ್ನು ಮುಂದೂಡಿರುವುದು ಸಾಹಿತ್ಯಾಭಿಮಾನಿಗಳು, ಆಸಕ್ತರಲ್ಲಿ ನಿರಾಶೆ ಮೂಡಿದ್ದು, ಸರ್ಕಾರ ಆದಷ್ಟು ಬೇಗ ಮುಂದಿನ ದಿನಾಂಕ ನಿಗದಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ