ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನಮ್ಮ ರಾಜ್ಯದ ಅವಶ್ಯಕತೆಗಳಿಗೆ ಅನುಗುಣವಾಗಿ ಅಳವಡಿಸಿಕೊಳ್ಳುವ ಕುರಿತಂತೆ ಹಾಗೂ ಈಗಾಗಲೇ ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಉಪಕ್ರಮಗಳು ಮತ್ತು ರಾಷ್ಟ್ರೀಯ ನೀತಿಯ ಆಶಯದೊಂದಿಗೆ ಅನುಷ್ಠಾನ ಮಾಡಬೇಕಾದ ಕಾರ್ಯಯೋಜನೆಗಳ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸಮಗ್ರ ಶಿಕ್ಷಣ ಕರ್ನಾಟಕ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ನೂತನ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕರಡು ಸಿದ್ಧವಾಗಿದ್ದು, ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವಾಗ ಅನುಸರಿಸಬೇಕಾದ ವಿಷಯಗಳನ್ನು ಗಮನದಲ್ಲಿಸಿಕೊಳ್ಳಬೇಕಾದ ಅಗತ್ಯತೆಯನ್ನು ವಿವರಿಸಿದರು.
ಪೂರ್ವ ಬಾಲ್ಯವಸ್ಥೆಯ ಶಿಕ್ಷಣ, ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ, ಶಾಲೆಯಿಂದ ಹೊರಗುಳಿದ ಮಕ್ಕಳ ದರ ಕಡಿತಗೊಳಿಸುವುದು, ಶಾಲಾ ಪಠ್ಯಕ್ರಮ ಮಾದರಿ, ಗುಣಮಟ್ಟದ ಶಿಕ್ಷಣ-ಶಿಕ್ಷಕರ ಸೇವೆಗಳು, ಪರಿಣಾಮಕಾರಿ ಆಡಳಿತ ವ್ಯವಸ್ಥೆ, ನಿಯಂತ್ರಣಾ ವ್ಯವಸ್ಥೆ ಸೇರಿದಂತೆ ಶಾಲಾ ಶಿಕ್ಷಣದ ವಿವಿಧ ಘಟ್ಟಗಳು ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಮೆಟ್ಟಿ ನಿಲ್ಲುವಲ್ಲಿ, ಮುಂದಿನ ಎರಡು ದಶಕಗಳ ಶೈಕ್ಷಣಿಕ ಕ್ಷೇತ್ರದ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರವಾದ ನೀತಿ ನಿರೂಪಣೆಗೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಹೇಳಿದರು.
ಇದನ್ನೂ ಓದಿ : ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ; ನಟಿ ರಿಯಾ ಚಕ್ರವರ್ತಿ ಅರ್ಜಿಯ ತೀರ್ಪನ್ನು ನಾಳೆ ನೀಡಲಿರುವ ಸುಪ್ರೀಂ
ಹಾಗೆಯೇ ತಾವು ಇಂದು ಬೆಳಗ್ಗೆ ಉನ್ನತ ಶಿಕ್ಷಣ ಇಲಾಖೆ ಉಸ್ತುವಾರಿ ಹೊಂದಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರೊಂದಿಗೆ ನಡೆದ ಉನ್ನತ ಶಿಕ್ಷಣ ಇಲಾಖೆಯ ಚರ್ಚೆಯಲ್ಲಿ ಭಾಗವಹಿಸಿದ್ದು, ನೂತನ ಶಿಕ್ಷಣ ನೀತಿಯನ್ನು ಉನ್ನತ ಶಿಕ್ಷಣ ಇಲಾಖೆಯು ಜಾರಿಗೊಳಿಸಲಿದೆ. ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಗಳು ಕೆಲವೇ ದಿನಗಳಲ್ಲಿ ಸಮಗ್ರ ನೀತಿಯನ್ನು ಹೊರತರುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿವೆ ಎಂದು ಅವರು ಹೇಳಿದರು.
ಸಭೆಯಲ್ಲಿ ವಿಧಾನಪರಿಷತ್ತಿನ ಸದಸ್ಯ ಅರುಣ್ ಶಹಾಪುರ, ಅಜೀಂ ಪ್ರೇಮ್ಜಿ ಪ್ರತಿಷ್ಠಾನದ ಡಾ. ಹೃಷಿಕೇಶ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಕೆ.ಜಿ.ಜಗದೀಶ್, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ದೀಪಾಚೋಳನ್ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ