K Sudhakar: ಜೀವನವಿಡೀ ಗಳಿಸಿದ ಹೆಸರು ಉಳಿಸಿಕೊಳ್ಳಲು ಕೋರ್ಟ್​ ಮೊರೆ; ಸಚಿವ ಡಾ. ಸುಧಾಕರ್ ಸ್ಪಷ್ಟನೆ

ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಡಾ.ಕೆ.ಸುಧಾಕರ್.

ಸಚಿವ ಡಾ.ಕೆ.ಸುಧಾಕರ್.

  • Share this:
    ಬೆಂಗಳೂರು (ಮಾ. 6): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ ರಾಜಕಾರಣದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಆ ಪ್ರಕರಣದಿಂದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅದರ ಬೆನ್ನಲ್ಲೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ರಾಜ್ಯ ಸರ್ಕಾರದ ಆರು ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಈ 6 ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದ್ದು, ಚರ್ಚೆಗೂ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ನಾವು ಇದುವರೆಗೂ ಸಂಪಾದಿಸಿರುವ ಹೆಸರು ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್​ನಲ್ಲಿ ಅರ್ಜಿ ಹಾಕಲಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.



    ಸತ್ಯ ಹೊಸಿಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.



    ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ನಮಗೆಲ್ಲರಿಗೂ ಸಂಪೂರ್ಣ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸರಣಿ ಟ್ವೀಟ್ ಮಾಡಿದ್ದಾರೆ.



    ವಕೀಲ ಚೆನ್ನಬಸಪ್ಪ ಅವರ ಮೂಲಕ ಸಿಟಿ ಸಿವಿಲ್ ಕೋರ್ಟ್​ನಲ್ಲಿ 6 ಸಚಿವರು ಅರ್ಜಿ ಹಾಕಿದ್ದಾರೆ. ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಹೋದ ಸಚಿವರಾದ ಶಿವರಾಮ್ ಹೆಬ್ಬಾರ್, ಎಸ್​.ಟಿ ಸೋಮಶೇಖರ್​, ನಾರಾಯಣ ಗೌಡ, ಭೈರತಿ ಬಸವರಾಜ್​, ಬಿ.ಸಿ ಪಾಟೀಲ್​, ಡಾ. ಕೆ. ಸುಧಾಕರ್​​ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ಮೊರೆ ಹೋಗಿದ್ದಾರೆ. 67 ಸುದ್ದಿ ಸಂಸ್ಥೆಗಳನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಯನ್ನು 68ನೇ ಪ್ರತಿವಾದಿಯನ್ನಾಗಿ ಮಾಡಲಾಗಿದೆ.

    ಇನ್ನೂ ಕೆಲವು ರಾಜಕಾರಣಿಗಳ ಸಿಡಿ ಬಿಡುಗಡೆಯ ಸಾಧ್ಯತೆ ಬಗ್ಗೆ ಹೇಳಿಕೆ ನೀಡಿದ್ದ ರಾಜಶೇಖರ್ ಮುಲಾಲಿ ಅವರನ್ನು ಕೂಡ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಜೊತೆಗೆ, ಫೇಸ್ ಬುಕ್, ಟ್ವಿಟರ್, ವಾಟ್ಸಾಪ್, ಯೂಟ್ಯೂಬ್ ಅನ್ನು ಸಹ ಸಚಿವರ ಪರ ವಕೀಲರು ಪ್ರತಿವಾದಿಯನ್ನಾಗಿ ಮಾಡಿದ್ದಾರೆ.
    Published by:Sushma Chakre
    First published: