ಬೆಂಗಳೂರು(ಮಾ.02): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಲು-ಸಾಲು ಪ್ರತಿಭಟನೆಗಳು ನಡೆಯಲಿವೆ. ಒಂದೆಡೆ ಸಾರಿಗೆ ನೌಕರರ ಮುಷ್ಕರ, ಇನ್ನೊಂದೆಡೆ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಮಗದೊಂದೆಡೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ರ್ಯಾಲಿಗೆ ಕರೆ ನೀಡಿದ್ದಾರೆ. ಅದರಂತೆ, ಸರ್ಕಾರ ವಿರುದ್ಧ ಪ್ರತಿಭಟನೆ ನಡಸಲು ಅಂಗನವಾಡಿ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ರ್ಯಾಲಿ ಬೆಳಿಗ್ಗೆ 11 ಗಂಟೆಗೆ ಶುರುವಾಗಲಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ಸಾಗಲಿದೆ. ಪ್ರಮುಖ ಬೇಡಿಕೆಗಳನ್ನಿಟ್ಟು ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.
ಪ್ರಮುಖ ಬೇಡಿಕೆಗಳು
ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಿಂದಲೂ ಸಾಕಷ್ಟು ಸಂಖ್ಯೆಯಲ್ಲು ಅಂಗನವಾಡಿ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಪ್ರತಿಭಟನೆಯ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ರ್ಯಾಲಿ ಹೊರಡುವ ಹಿನ್ನೆಲೆ. ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರ ವಹಿಸಬೇಕಿದೆ.
ಇನ್ನು, ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಜನ ಸಾಮಾನ್ಯರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಬೆಳಿಗ್ಗೆ 10:30ಕ್ಕೆ ಸಿಟಿ ರೈಲ್ವೆ ನಿಲ್ದಾಣದ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಪಾದಯಾತ್ರೆ ಹೊರಟು, ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆವರೆಗೆ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದ ಪ್ರತಿಭಟನೆ ನಡೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ