ಬೆಂಗಳೂರು (ಅ. 11): ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರವಾಗಿ ಮಳೆ ಸುರಿದಿದೆ. ಮಧ್ಯರಾತ್ರಿಯವರೆಗೂ ಸುರಿದ ಮಳೆಯಿಂದ ರಸ್ತೆಗಳು, ಅಂಡರ್ಪಾಸ್ನಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ಮನೆಯೊಳಗೂ ನೀರು ತುಂಬಿತ್ತು. ಇಂದು ಮುಂಜಾನೆಯಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಇಡೀ ದಿನ ಮೋಡದ ವಾತಾವರಣ ಇರಲಿದ್ದು, ಚಳಿಗಾಳಿಯೂ ಬೀಸಲಿದೆ. ಮಧ್ಯಾಹ್ನದ ಬಳಿಕ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ್ದರಿಂದ ಹಾಗೂ ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಧಾರಾಕಾರವಾಗಿ ಮಳೆಯಾಗುತ್ತಿದೆ. ನಿನ್ನೆ ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಜಯನಗರ, ಬಸವನಗುಡಿ, ಎಲೆಕ್ಟ್ರಾನಿಕ್ ಸಿಟಿ, ಮೆಜೆಸ್ಟಿಕ್, ಮಲ್ಲೇಶ್ವರ, ರಾಜಾಜಿನಗರ, ಬನಶಂಕರಿ, ಪದ್ಮನಾಭನಗರ ಭಾಗಗಳಲ್ಲಿ ಭಾರೀ ಮಳೆ ಸುರಿದು, ರಸ್ತೆಗಳೆಲ್ಲ ಹಳ್ಳಗಳಂತಾಗಿತ್ತು. ಶಿವಾನಂದ ಸರ್ಕಲ್, ಕೊಡಿಗೇಹಳ್ಳಿ, ಕೆ.ಆರ್. ಸರ್ಕಲ್ ಬಳಿ ಅಂಡರ್ಪಾಸ್ನಲ್ಲಿ ನೀರು ತುಂಬಿ ಕೆರೆಯಂತಾಗಿತ್ತು.
ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ ಶುರು; ಕರಾವಳಿಯಲ್ಲಿಂದು ಹಳದಿ ಅಲರ್ಟ್ ಘೋಷಣೆ
ಬೆಂಗಳೂರಿನ ಮಲ್ಲೇಶ್ವರದಲ್ಲಿ ನಿನ್ನೆ ರಾತ್ರಿ ಡಿಸಿಎಂ ಅಶ್ವಥ್ ನಾರಾಯಣ ಅವರ ಕಚೇರಿ ಮುಂದೆ ಮರದ ಕೊಂಬೆ ಮುರಿದು ಬಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಸಿಬ್ಬಂದಿ ಮರದ ರೆಂಬೆಯನ್ನು ತೆರವುಗೊಳಿಸಿದರು. ಕರಾವಳಿಯ ಮಂಗಳೂರು, ಉಡುಪಿ, ಉತ್ತರ ಕನ್ನಡದಲ್ಲೂ ನಿನ್ನೆ ಗುಡುಗು ಸಹಿತ ಮಳೆಯಾಗಿದೆ. ಮಲೆನಾಡಿನ ಅನೇಕ ಕಡೆಗಳಲ್ಲೂ ಮತ್ತೆ ಮಳೆಯ ದರ್ಶನವಾಗಿದೆ. ಇದೇ ರೀತಿಯ ಮಳೆ ರಾಜ್ಯಾದ್ಯಂತ ಇನ್ನೂ 3 ದಿನಗಳು ಮುಂದುವರೆಯಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಇಂದಿನಿಂದ ಅ.13ರವರೆಗೂ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಹೆಚ್ಚಾಗಲಿದೆ. ಈ ಮೂರು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ