ಬೆಂಗಳೂರು (ಜ. 6): ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದ ಶುರುವಾದ ಮಳೆ ಇಂದು ಮುಂಜಾನೆಯವರೆಗೂ ಸುರಿದಿದೆ. ದಿನಗಟ್ಟಲೆ ಸುರಿದ ತುಂತುರು ಮಳೆ ಇಂದು ಕೂಡ ಮುಂದುವರೆಯಲಿದೆ. ಇಂದು ದಿನವಿಡೀ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದಿಂದ ಮತ್ತೆ ಮಳೆ ಸುರಿಯುವ ಸಾಧ್ಯತೆಯಿದೆ. ಅಲ್ಲದೆ, ಜ. 10ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಕಳೆದೆರಡು ದಿನಗಳಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ವರುಣನ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದ ಸಾಕಷ್ಟು ಕಡೆ ನೀರು ನಿಂತು ಜನರು ಪರದಾಡುವಂತಾಗಿತ್ತು. ಮಳೆಯಿಂದ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆಯೂ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಸಹ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ತುಂತುರು ಮಳೆ ಮುಂದುವರೆದಿದೆ. ಇಂದು ಮತ್ತು ನಾಳೆಯೂ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಇನ್ನೆರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಚಳಿಯೂ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದಿಂದ ಇಂದು ಬೆಳಗಿನ ಜಾವ 6 ಗಂಟೆಯವರೆಗೆ ಮಳೆ ಸುರಿದಿದೆ. ಕೆ ಆರ್ ಪುರ, ಮೆಜೆಸ್ಟಿಕ್, ಶಾಂತಿನಗರ, ಹಲಸೂರು, ಜಯನಗರ, ಜೆಪಿನಗರ, ರಾಜಾಜಿನಗರ, ಹನುಮಂತನಗರ, ಕತ್ರಿಗುಪ್ಪೆ, ಬನಶಂಕರಿ, ಬಸವನಗುಡಿ, ಗಿರಿನಗರ, ವಿಜಯನಗರ, ಮಲ್ಲೇಶ್ವರ ಸೇರಿ ಹಲವೆಡೆ ಮಳೆಯಾಗಿದೆ.
ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಜ. 10ರವರೆಗೆ ಬೆಂಗಳೂರಿನಲ್ಲೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಜನವರಿ 10ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 3 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ