Ashwath Narayan: ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಉಡುಗೊರೆ; ವೇತನ ಹೆಚ್ಚಳ

ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ

ಸಚಿವ ಅಶ್ವಥ್ ನಾರಾಯಣ

ಸಚಿವ ಅಶ್ವಥ್ ನಾರಾಯಣ

  • Share this:
ಬೆಂಗಳೂರು (ಜ. 14): ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ (Guest Lecture)   ವೇತನ (Salary) ಹೆಚ್ಚಳ ಮಾಡಿ ಆದೇಶ ಮಾಡಿದೆ. ಈ ಮೂಲಕ ಹಲವು ದಿನಗಳಿಂದ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಕಡೆಗೂ ಈಡೇರಿದಂತೆ ಆಗಿದೆ. ಇದರ ಜೊತೆಗೆ ಅತಿಥಿ ಉಪನ್ಯಾಸಕರನ್ನು  ಸೆಮಿಸ್ಟರ್-ವಾರು ನೇಮಕಾತಿಯನ್ನು ನಿಲ್ಲಿಸಿ, ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿ ಕೊಳ್ಳುವುದಾಗಿ ಘೋಷಿಸಿದೆ.

ಈ ಸಂಬಂಧ ಇಂದು ವಿಧಾನಸೌಧದಲ್ಲಿ ತಿಳಿಸಿದರ  ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.  ಇದೊಂದು ಐತಿಹಾಸಿಕ ತೀರ್ಮಾನ. ಇದಕ್ಕೆ ಮಿಂಚಿನ ವೇಗದಲ್ಲಿ ಪರಿಹರ ಕೊಟ್ಟ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಬೋಧಕರು ಈ ಸಮಾಜದ ಸಂಪತ್ತು. ಅವರ ನೆಮ್ಮದಿಯೇ ಸಮಾಜದ ನೆಮ್ಮದಿ ಎಂದು ಅತಿಥಿ ಉಪನ್ಯಾಸಕರ ಕಾರ್ಯವನ್ನು ಶ್ಲಾಘಿಸಿದರು.

ಇನ್ಮುಂದೆ 10 ದಿನಗೊಳಗೆ ವೇತನ

ಹಾಗೆಯೇ, ಯುಜಿಸಿ ಬಯಸುವ ಶೈಕ್ಷಣಿಕ ಅರ್ಹತೆ ಹೊಂದದೆ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 28 ಸಾವಿರ ರೂ. ಮತ್ತು ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 26 ಸಾವಿರ ರೂ. ಗೌರವಧನ ನಿಗದಿಪಡಿಸಲಾಗಿದೆ. ಜತೆಗೆ, ಇವರು ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಅವರು ವಿವರಿಸಿದರು.

ಇದನ್ನು ಓದಿ: ಗವಿ ಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ; ದೇಗುಲದಲ್ಲಿ ಮೊಳಗಿದ ಗಂಟಾಘೋಷ

ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಮಿಕ್ಕವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು.
ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ಲನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು  ಎಂದು ಅವರು ತಿಳಿಸಿದರು.

ಇದನ್ನು ಓದಿ: ಜಿಲ್ಲೆಗೆ ತಾರತಮ್ಯ: ಮಂಗಳವಾರ ಸಿಎಂ ಮನೆ ಮುಂದೆ HD Revanna ಧರಣಿ

ಬೇಡಿಕೆ ಈಡೇರಿಕೆಗೆ ತ್ರಿ ಸದಸ್ಯ ಸಮಿತಿ ರಚನೆ

ಅತಿಥಿ ಉಪನ್ಯಾಸಕರ ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರವು ತಿಂಗಳ ಹಿಂದೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ವರದಿ ನೀಡಲು ಒಂದು ನಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

`ಅತಿಥಿ ಉಪನ್ಯಾಸಕರ ಸಮಸ್ಯೆ 2002ರಿಂದಲೂ ಇತ್ತು. ಆದರೆ ಹಿಂದಿನ ಸರಕಾರಗಳು ಇದನ್ನು ಸರಿಯಾಗಿ ನಿಭಾಯಿಸದೆ ಇದ್ದುದರಿಂದ ಇದೊಂದು ಕಗ್ಗಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸಹಾನುಭೂತಿ ಮತ್ತು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿದರು. ಇದರಿಂದಾಗಿ ಕೇವಲ ಒಂದು ತಿಂಗಳಲ್ಲಿ ಪರಿಹಾರ ರೂಪಿಸುವುದು ಸಾಧ್ಯವಾಯಿತು’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
Published by:Seema R
First published: