Kempegowda Layout: ನಾಡಪ್ರಭು ಕೆಂಪೇಗೌಡ ಬಡಾವಣೆ ತ್ವರಿತ ಕಾಮಗಾರಿ ನಡೆಸಿ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ
ಬಡಾವಣೆ ಅಭಿವೃದ್ಧಿ ಕಾಮಗಾರಿಯನ್ನು ಮತ್ತಷ್ಟು ಚುರುಕುಗೊಳಿಸಬೇಕೆಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯ (Kempegowda Layout) ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ (BDA President SR Vishwanath) ಅವರು ಬಿಡಿಎ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.ಸೋಮವಾರ ಬಿಡಿಎ ಅಧಿಕಾರಿಗಳೊಂದಿಗೆ ಬಡಾವಣೆಯ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೋವಿಡ್ ಮತ್ತು ಇತರೆ ಕಾರಣಗಳಿಂದ ಬಡಾವಣೆ ಕಾಮಗಾರಿಗೆ (Kempegowda Layout Works) ಹಿನ್ನಡೆ ಉಂಟಾಗಿತ್ತು. ಇದೀಗ ಪರಿಸ್ಥಿತಿ ಸುಧಾರಣೆಯಾಗಿದ್ದು, ಕಾಮಗಾರಿಗಳನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. ನೀರು ಪೂರೈಕೆಗೆ ಕ್ರಮಬಡಾವಣೆಯಲ್ಲಿ ನಿವೇಶನ ಪಡೆದಿರುವ ನಾಗರಿಕರು ತಮ್ಮ ಕನಸಿನ ಸೂರನ್ನು ಕಟ್ಟಿಕೊಳ್ಳಲು ಮುಂದೆ ಬಂದರೆ ಅವರಿಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.
ಬಡಾವಣೆಯ ಬಹುತೇಕ ಬ್ಲಾಕ್ಗಳಲ್ಲಿ ವಿದ್ಯುತ್ ಸಂಪರ್ಕ ಜಾಲ, ಒಳಚರಂಡಿ ಸೇರಿದಂತೆ ಇನ್ನಿತರೆ ಸಂಪರ್ಕ ಜಾಲಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಕೆಲವು ಬ್ಲಾಕ್ ಗಳಲ್ಲಿ ಕಾಮಗಾರಿ ಚಾಲ್ತಿಯಲ್ಲಿದೆ.
ಹಣಕಾಸಿನ ತೊಂದರೆ ಇಲ್ಲ
ಬಡಾವಣೆ ನಿರ್ಮಾಣಕ್ಕೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ಗುತ್ತಿಗೆದಾರರಿಗೆ ನೀಡಬೇಕಿರುವ ಹಣ ಮಂಜೂರಿಗೆ ಸದ್ಯದಲ್ಲಿಯೇ ಕ್ರಮ ವಹಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡಾವಣೆ ಅಭಿವೃದ್ಧಿ ಕಾಮಗಾರಿಯನ್ನು ಮತ್ತಷ್ಟು ಚುರುಕುಗೊಳಿಸಬೇಕೆಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.
ಕಾಮಗಾರಿ ವಿಳಂಬ ಮಾಡಿದರೆ ಗುತ್ತಿಗೆ ರದ್ದು!
ಬಡಾವಣೆಯ ಅಭಿವೃದ್ಧಿ ಗುತ್ತಿಗೆ ಪಡೆದಿರುವ ಒಂದೆರಡು ಕಂಪನಿಗಳು ಕಾಮಗಾರಿ ಕೈಗೊಳ್ಳುವಲ್ಲಿ ವಿಳಂಬ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅಂತಹ ಕಂಪನಿಗಳಿಗೆ ಎಚ್ಚರಿಕೆ ನೀಡಿ, ಗುತ್ತಿಗೆಯನ್ನು ರದ್ದು ಮಾಡಿ ಬೇರೆ ಕಂಪನಿಗೆ ವಹಿಸುವ ಬಗ್ಗೆ ಸದ್ಯದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸ್ಪಷ್ಟಪಡಿಸಿದರು.
ಕೆರೆಗೆ ತಡೆಗೋಡೆ ನಿರ್ಮಾಣಕನ್ನಹಳ್ಳಿ ಕೆರೆ ತಟದಲ್ಲಿ ಸುಮಾರು 600 ಕ್ಕೂ ಹೆಚ್ಚು ನಿವೇಶನಗಳಿವೆ. ಸುಮಾರು ಐದಾರು ವರ್ಷಗಳ ನಂತರ ಕೆರೆ ತುಂಬಿರುವುದರಿಂದ ಈ ನಿವೇಶನಗಳಲ್ಲಿ ನೀರಿನ ಅಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ ದಂಡೆಯ ಸಮೀಪದಲ್ಲಿ ಸುಮಾರು 8 ಮೀಟರ್ ಆಳದವರೆಗೆ ತಡೆಗೋಡೆ ನಿರ್ಮಾಣ ಮಾಡಿ ನೀರಿನ ಅಂಶ ಬಾರದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿರುವುದಾಗಿ ತಿಳಿಸಿದರು.
ಅಗತ್ಯ ಸಂಪರ್ಕವನ್ನೂ ಕಲ್ಪಿಸುತ್ತೇವೆ
ನಿವೇಶನದಾರರಿಗೆ ಮನೆ ಕಟ್ಟಿಕೊಳ್ಳಲು ಅಗತ್ಯವಾಗಿ ವಿದ್ಯುತ್, ನೀರು ಮತ್ತು ರಸ್ತೆ ಬೇಕಾಗಿರುತ್ತದೆ. ಈಗಾಗಲೇ ವಿದ್ಯುತ್ ಮತ್ತು ನೀರಿನ ಸಂಪರ್ಕಗಳನ್ನು ಅಳವಡಿಸಲಾಗಿದೆ. ಮನೆಗಳು ನಿರ್ಮಾಣವಾಗುವ ಸಂದರ್ಭದಲ್ಲಿ ಹಂತಹಂತವಾಗಿ ಈ ಸಂಪರ್ಕಗಳನ್ನು ಕಲ್ಪಿಸಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.
ಇದೇ ವೇಳೆ, ವಾಹನ ಸಂಚಾರಕ್ಕೆ ಯೋಗ್ಯವಾಗುವ ರೀತಿಯಲ್ಲಿ ರಸ್ತೆಗಳನ್ನು ಸಮತಟ್ಟು ಮಾಡಿ ಅಭಿವೃದ್ಧಿಪಡಿಸಲಾಗುತ್ತದೆ. ನಂತರ ಡಾಂಬರೀಕರಣ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಡಿಎ ಆಯುಕ್ತ ರಾಜೇಶ್ ಗೌಡ, ಅಭಿಯಂತರ ಸದಸ್ಯ ಡಾ.ಶಾಂತರಾಜಣ್ಣ, ಕಾರ್ಯದರ್ಶಿ ಆನಂದ್, ಉಪ ಆಯುಕ್ತೆ ಡಾ.ಸೌಜನ್ಯ ಸೇರಿದಂತೆ ಅಧಿಕಾರಿಗಳು ಇದ್ದರು.
ವರದಿ: ಶರಣ ವೈ ಎಂ
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ