Bengaluru Development- ಬೆಂಗಳೂರು ಅಭಿವೃದ್ಧಿ ಕುರಿತು ಸಿಎಂ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ

ಬೆಂಗಳೂರಿನಲ್ಲಿ ಮಳೆಯಿಂದ ಹಾಳಾದ ಪ್ರಮುಖ ರಸ್ತೆಗಳ ದುರಸ್ತಿ, ಎಲ್ಇಡಿ ಬೀದಿದೀಪಗಳ ಅಳವಡಿಕೆ, ಗ್ರಾಮೀಣ ಭಾಗದಲ್ಲಿ ದುಃಸ್ಥಿತಿಯಲ್ಲಿರುವ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನ ಸಿಎಂ ನೇತೃತ್ವದ ಸಭೆಯಲ್ಲಿ ಕೈಗೊಳ್ಳಲಾಯಿತು.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ

  • Share this:
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರಿನ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ಮಂಗಳವಾರ ಸಭೆ ನಡೆಯಿತು. ಸುಮಾರು ಮೂರು ಗಂಟೆ ಗಳ ಕಾಲ ನಡೆ ಮಹತ್ವದ ಸಭೆಯಲ್ಲಿ ಹಲವಾರು ಸಿಲಿಕಾನ್ ಸಿಟಿ ಅಭಿವೃದ್ಧಿಗೆ ವಿಚಾರವಾಗಿ ಮಹತ್ವದ ಚರ್ಚೆ ನಡೆಸಲಾಯಿತು. ವಿಶ್ವ ಮಟ್ಟದಲ್ಲಿ ಗುರುತಿಸಲ್ಪಡುವ ಬೆಂಗಳೂರು ನಗರದ ಅಭಿವೃದ್ಧಿಯ ಯೋಜನೆಗಳು ಇನ್ನಷ್ಟು ಚುರುಕಾಗಿ ಅನುಷ್ಠಾನಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಅಭಿವೃದ್ಧಿಯ ವಿಚಾರದಲ್ಲಿ ಸಚಿವರೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿಸಲಾಗುವುದು. ಒಟ್ಟಾಗಿ ಕುಳಿತು ಚರ್ಚಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಶಾಸಕರ ಅಭಿಪ್ರಾಯಗಳನ್ನೂ ಪರಿಗಣಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Anand Singh- ಭಾನುವಾರವೇ ರಾಜೀನಾಮೆ ಕೊಟ್ಟರಾ ಆನಂದ್ ಸಿಂಗ್? ಬಿಜೆಪಿಗೆ ತಲೆನೋವಾದ ಅಸಮಾಧಾನಿತರು

ಸಿಎಂ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

* ಬಿಬಿಎಂಪಿ ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸುವಂತೆ ಸಲಹೆ ನೀಡಲಾಯಿತು.

* ಬಿಡಬ್ಲ್ಯು.ಎಸ್.ಎಸ್.ಬಿ.ಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್ ವೆಲ್ ಗಳಲ್ಲಿ ಸುಸ್ಥಿತಿಯಲ್ಲಿರುವ   ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

* ನಗರದಲ್ಲಿ ವರ್ಷಾಂತ್ಯದಲ್ಲಿ ಕನಿಷ್ಠ 3 ಲಕ್ಷ ಬೀದಿ ದೀಪಗಳನ್ನು ಎಲ್ ಇ ಡಿ ದೀಪಗಳಿಗೆ ಪರಿವರ್ತಿಸಲು ಸೂಚಿಸಲಾಯಿತು.

* ಮಳೆನೀರು ಚರಂಡಿಗಳ ಕುರಿತಂತೆ ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು.

* ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ/ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡುವಂತೆ ಸೂಚಿಸಲಾಯಿತು.

* 860 ಕಿ.ಮೀ. ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಯ ಬಗ್ಗೆ ಮತ್ತು ಸಂಚಾರ ನಿರ್ವಹಣೆ ಬಗ್ಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಕುರಿತು ಚಿಂತನೆ ನಡೆಸಲಾಗುವುದು.

* ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಿ.

* ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಿ.

* ಅಕ್ಟೋಬರ್ ಒಳಗೆ ಮೂರನೇ ಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಯಿತು.

* ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಚಿವರಾದ ಡಾ. ಸಿ ಎನ್ ಅಶ್ವತ್ಥ್ ನಾರಾಯಣ್, ವಿ. ಸೋಮಣ್ಣ, ಆರ್. ಅಶೋಕ್, ಅರಗ ಜ್ಞಾನೇಂದ್ರ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜ, ಮುನಿರತ್ನ, ಕೆ. ಗೋಪಾಲಯ್ಯ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್. ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

(ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)

ವರದಿ: ಸಂಜಯ್ ಎಂ ಹುಣಸನಹಳ್ಳಿ
Published by:Vijayasarthy SN
First published: