ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸೋಂಕು ತಗ್ಗುತ್ತಿರುವ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಶಾಲೆಗಳನ್ನು ಶುರು ಮಾಡಲು ಸುತ್ತೋಲೆಯನ್ನು ಹೊರಡಿಸಿದೆ. ಮತ್ತೆ ಶೈಕ್ಷಣಿಕ ವರ್ಷ ಪರಿಷ್ಕರಿಸಿದ್ದು, ಜೂನ್ 15 ರಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 8, 9,10 ನೇ ತರಗತಿಗಳಿಗೆ 2021-2022ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ ಆಗಲಿದೆ. ಶಾಲೆಗಳ ರಜಾ ಅವಧಿಯನ್ನೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಪ್ರೌಢ ಶಾಲೆಗಳಿಗೆ ಮೇ 31 ರವರೆಗೂ ರಜೆ ನೀಡಲಾಗಿತ್ತು. ಈಗ ಜೂನ್ 15ರವರೆಗೆ ಬೇಸಿಗೆ ರಜೆಯನ್ನು ವಿಸ್ತರಿಸಲಾಗಿದೆ. ಕೋವಿಡ್ ಹಿನ್ನೆಲೆ ಮತ್ತೆ ಶೈಕ್ಷಣಿಕ ವರ್ಷವನ್ನು ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. ರಜಾ ಅವಧಿ ಪರಿಷ್ಕರಿಸಿ ಸುತ್ತೊಲೆ ಹೊರಡಿಸಲಾಗಿದೆ. ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಇದ್ದಂತೆ ಪ್ರಾಥಮಿಕ ಶಾಲೆಗಳಿಗೆ ಜೂನ್ 14 ರವರೆಗೂ ಬೇಸಿಗೆ ರಜೆ ನೀಡಲಾಗಿದೆ.
ಪ್ರೌಢ ಶಾಲಾ ಶಿಕ್ಷಕರು ರಜೆಯ ಅವಧಿಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜೊತೆ ನಿರಂತರ ದೂರವಾಣಿ ಸಂಪರ್ಕದಲ್ಲಿರಬೇಕು. ವಿದ್ಯಾರ್ಥಿಗಳಿಗೆ ಕಲಿಕೆಗೆ ಪ್ರೇರೇಪಿಸಬೇಕು ಎಂದು ಸುತ್ತೋಲೆಯಲ್ಲಿ ಶಿಕ್ಷಕರಿಗೆ ಸೂಚಿಸಲಾಗಿದೆ. ಇನ್ನು ಜೂನ್ 15ರಿಂದ 8, 9,10 ನೇ ತರಗತಿಗಳಿಗೆ ಶಾಲೆ ಶುರು ಎಂದರೆ ಆನ್ಲೈನ್ ಮೂಲಕ ಮಾತ್ರ ಪಾಠಗಳು ನಡೆಯಲಿವೆ. ಆಫ್ಲೈನ್ ಶಾಲೆ ನಡೆಸುವ ಬಗ್ಗೆ ನಿರ್ಧಾರ ಆಗಿಲ್ಲ. ಕೊರೋನಾ 3ನೇ ಅಲೆ ಮಕ್ಕಳನ್ನು ಗುರಿಯಾಗಿಸಿಕೊಳ್ಳಲುವ ಆತಂಕ ಇರುವುದರಿಂದ ಶಾಲೆಗಳ ಬಾಗಿಲು ಸದ್ಯಕ್ಕೆ ತೆಗೆಯುವುದು ಅನುಮಾನ. ಆನ್ಲೈನ್ ಶಿಕ್ಷಣವೇ ಸದ್ಯದ ಮಾರ್ಗವಾಗಿದೆ. ಶಿಕ್ಷಣದ ಜೊತೆ ಮಕ್ಕಳ ಆರೋಗ್ಯ ನಮ್ಮ ಮೊದಲ ಆದ್ಯತೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು.
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,52,734 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,80,47,534ಕ್ಕೆ ಏರಿಕೆ ಆಗಿದೆ. ಶುಕ್ರವಾರ 3,128 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,29,100ಕ್ಕೆ ಏರಿಕೆ ಆಗಿದೆ. ದೇಶದಲ್ಲಿ ಇನ್ನೂ 20,26,092 ಆಕ್ಟಿವ್ ಕೇಸುಗಳಿವೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡವರ ಸಂಖ್ಯೆ 21 ಕೋಟಿ ದಾಟಿದೆ. ಈವರೆಗೆ 21,31,54,129 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಈವರೆಗೆ 2,56,92,342 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,38,022 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸತತವಾಗಿ 18ನೇ ದಿನವೂ ದೈನಂದಿನ ಹೊಸ ಪ್ರಕರಣಗಳಿಗಿಂತ ಗುಣ ಆಗುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯದ ಪಾಸಿಟಿವಿಟಿ ದರ ಶೇಖಡಾ 91.60ರಷ್ಟಾಗಿದೆ. ಸಾಪ್ತಾಹಿಕ ಪಾಸಿಟಿವಿಟಿ ದರ ಪ್ರಸ್ತುತ 9.04ರಷ್ಟಾಗಿದೆ. ದೈನಂದಿನ ಪಾಸಿಟಿವಿಟಿ ದರ 9.07ರಷ್ಟಾಗಿದ್ದು ಸತತವಾಗಿ 7 ದಿನಗಳವರೆಗೆ ಶೇಕಡಾ 10ಕ್ಕಿಂತ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ