HOME » NEWS » State » BENGALURU URBAN KARNATAKA WEATHER TODAY HEAVY RAIN ACROSS MALNAD REGION AND COASTAL KARNATAKA TODAY BANGALORE RAINS SCT

Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ; ಬೆಂಗಳೂರಿನ ಹವಾಮಾನ ಹೀಗಿದೆ

Bengaluru Rain Updates: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ.

Sushma Chakre | news18-kannada
Updated:June 21, 2021, 7:42 AM IST
Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ; ಬೆಂಗಳೂರಿನ ಹವಾಮಾನ ಹೀಗಿದೆ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ
  • Share this:
Karnataka Rain: ಬೆಂಗಳೂರು (ಜೂನ್ 21): ಸುಮಾರು 10 ದಿನಗಳಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇಂದು ಮತ್ತು ನಾಳೆ ಕೂಡ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಕೃಷ್ಣಾ ಮತ್ತು ಘಟಪ್ರಭಾ ನದಿ ತೀರಗಳಲ್ಲಿ ನೀರಿನ ಹರಿವು ಹೆಚ್ಚಾಗಿ, ಪ್ರವಾಹದ ಭೀತಿ ಎದುರಾಗಿದೆ.

ಇಂದು ಮತ್ತು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗುವ ಸಾಧ್ಯತೆಯಿದೆ.

ಮಳೆಯಿಂದ ಕರ್ನಾಟಕದ 20 ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Karnataka Unlock 2.O: ರಾಜ್ಯದಲ್ಲಿ ಇಂದಿನಿಂದ ಬಸ್, ಮೆಟ್ರೋ​ ಸಂಚಾರ ಆರಂಭ; ಪಾಲಿಸಬೇಕಾದ ನಿಯಮಗಳೇನು?

ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಈ ಬಾರಿಯೂ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಸುರಿದ ಮಳೆಯಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಬೆಳಗಾವಿ ಮತ್ತು ಬಾಗಲಕೋಟೆಯ 20ಕ್ಕೂ ಹೆಚ್ಚು ಸೇತುವೆಗಳು ಮುಳುಗಿವೆ.ಕರ್ನಾಟಕ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದ 1,710 ಗ್ರಾಮಗಳು ಪ್ರವಾಹದ ಭೀತಿಯಲ್ಲಿವೆ. ಈ ಗ್ರಾಮಗಳತ್ತ ಹೆಚ್ಚಿನ ನಿಗಾ ವಹಿಸಲು ಸರ್ಕಾರ ಸೂಚಿಸಿದೆ. ಕಳೆದ ವರ್ಷದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಎಚ್ಚರ ವಹಿಸಲು ಆದೇಶಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದ್ದು, ನಾಳೆಯಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬಣಕಲ್, ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಘಾಟ್​ನಲ್ಲಿ 39.58 ಸೆ.ಮೀ. ದಾಖಲಾಗಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Bengaluru Unlock 2.0: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್​ಡೌನ್ ತೆರವು; ಯಾವುದಕ್ಕೆ ಅನುಮತಿ? ಯಾವುದು ನಿಷೇಧ?

ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ನೈಋತ್ಯ ಮಾನ್ಸೂನ್ ಅಬ್ಬರ ಹೆಚ್ಚಾಗಲಿದೆ. ಇದರಿಂದ ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಹೊಸನಗರ, ತೀರ್ಥಹಳ್ಳಿ, ಸಾಗರ, ಸಿದ್ಧಾಪುರ, ಶಿರಸಿ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು ತಾಲೂಕುಗಳಲ್ಲಿ ಮಳೆಯ ಅಬ್ಬರ ಇಂದು ಕೂಡ ಮುಂದುವರೆಯಲಿದ್ದು, ಶರಾವತಿ, ತುಂಗಾ, ಭದ್ರಾ, ವರಾಹಿ, ವರದಾ, ಅಘನಾಶಿನಿ ನದಿಗಳು ತುಂಬಿ ಹರಿಯುತ್ತಿವೆ. ತುಂಗಾ ಜಲಾಶಯದಿಂದ ಈಗಾಗಲೇ ನೀರನ್ನು ಹೊರಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ.ಕೊಡಗಿನಲ್ಲೂ ಮಳೆ ಹೆಚ್ಚಾಗಿದ್ದು, ಸಾಕಷ್ಟು ಕಡೆ ಭೂಕುಸಿತಗಳಾಗಿವೆ. ಮಳೆಯಿಂದ ಇರ್ಪು, ಮಲ್ಲಳ್ಳಿ ಸೇರಿದಂತೆ ಅನೇಕ ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತಿವೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಹಲವೆಡೆ ಮರ ಬಿದ್ದು, ಗುಡ್ಡ ಕುಸಿತದಿಂದ ರಸ್ತೆಗಳು ಬಂದ್ ಆಗಿವೆ. ಬಹುತೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
Youtube Video

ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಕೇರಳ, ಸಿಕ್ಕಿಂ, ಹಿಮಾಚಲಪ್ರದೇಶ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಗೋವಾ, ಮೇಘಾಲಯ, ನಾಗಾಲ್ಯಾಂಡ್, ಬಿಹಾರ, ಗುಜರಾತ್, ಮಹಾರಾಷ್ಟ್ರ, ಮಾಹೆ ಮುಂತಾದ ಪ್ರದೇಶಗಳಲ್ಲೂ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.
Published by: Sushma Chakre
First published: June 21, 2021, 7:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories