ಬೆಂಗಳೂರು (ಜೂ. 4) ಕೆಎಸ್ಆರ್ಟಿಸಿ ಲೋಗೊ ಬಳಕೆ ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವಿನ ಏಳು ವರ್ಷದ ಹೋರಾಟದಲ್ಲಿ ಕೇರಳಗೆ ಜಯವಾಗಿದೆ, ಇನ್ಮುಂದೆ ಲೋಗೋವನ್ನು ಕರ್ನಾಟಕ ಬಳಸುವಂತಿಲ್ಲ ಎಂಬ ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಆದೇಶ ಸತ್ಯಕ್ಕೆ ದೂರವಾಗಿದೆ ಎಂದು ಕೆಎಸ್ಆರ್ಟಿಸಿ ನಿಗಮನದ ಅಧ್ಯಕ್ಷ ಶಿವಯೋಗಿ ಕಳಸದ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಅಧ್ಯಕ್ಷರು, ಕೆಎಸ್ಆರ್ಟಿಸಿ” ಎಂದು ಬಳಸುವಂತಿಲ್ಲ ಎಂಬ ಕುರಿತು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿರುವುದಿಲ್ಲ ಎಂದು ತಿಳಿಸಿದ್ದಾರೆ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿ ಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ. ಏತನ್ಮಧ್ಯೆ, ಸದರಿ ಮಂಡಳಿಯನ್ನು ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ. ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್ಆರ್ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್ಆರ್ಟಿಸಿಯು ತನಗೆ ನೀಡಲಾಗಿರುವ ಟ್ರೇಡ್ಮಾರ್ಕ್ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು ಎಂದಿದ್ದಾರೆ.
ಈ ಹಿನ್ನಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ಟಿಸಿ’ ಟ್ರೇಡ್ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವಿರುವುದಿಲ್ಲ.
ಕೇರಳ ಎಸ್ಆರ್ಟಿಸಿಯು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎನ್ನಲಾಗಿತ್ತಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೇಳಿರುವ ಈ ವಿಚಾರ ಸತ್ಯಕ್ಕೆ ದೂರವಾದ ಹಾಗೂ ಕಾನೂನಾತ್ಮಕವಲ್ಲದ ವರದಿಯಾಗಿದೆ. ಈ ಬಗ್ಗೆ ಕಾನೂನು ಕ್ರಮಗಳನ್ನು ಜರುಗಿಸುವ ನಮ್ಮ ಹಕ್ಕನ್ನು ಸಂಸ್ಥೆಯು ಕಾಯ್ದಿರಿಸಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಸೆಂಟ್ರಲ್ ವಿಸ್ಟಾ ಯೋಜನೆಗೆ ವಿರೋಧಿಸಿದ್ದ ರಾಜಸ್ಥಾನ ಕಾಂಗ್ರೆಸ್ನಿಂದ ಶಾಸಕರಿಗಾಗಿ ಲಕ್ಸುರಿ ಫ್ಲಾಟ್ ನಿರ್ಮಾಣ
ಏನಿದು ಗೊಂದಲ ?
ಕೇರಳ 1965ರಿಂದಲೇ ಕೆಎಸ್ಆರ್ಟಿಸಿ ಟ್ರೇಡ್ ಮಾರ್ಕ್ನ್ನು ಬಳಸುತ್ತಿದೆ. ಕರ್ನಾಟಕ ಸರ್ಕಾರ 1973ರಿಂದ ಕೆಎಸ್ಆರ್ಟಿಸಿ ಹೆಸರನ್ನು ಬಳಸುತ್ತಿದೆ. ಹೀಗಾಗಿ ನಾವು ಮೊದಲು ಕೆಎಸ್ಆರ್ಟಿಸಿ ಹೆಸರು ಬಳಸಿರುವುದರಿಂದ ನಮಗೆ ಈ ಟ್ರೇಡ್ ಮಾರ್ಕ್ ಕೊಡಬೇಕೆಂದು ಕೇರಳ ಸುದೀರ್ಘ 27 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿತ್ತು. ಆದರೆ, ಈ ಬಗ್ಗೆ 2014ರಲ್ಲಿ ಕೇರಳಕ್ಕೆ ಈ ಟ್ರೇಡ್ ಮಾರ್ಕ್ ಬಳಸದಂತೆ ಕರ್ನಾಟಕ ಸರ್ಕಾರ ಸೂಚಿಸಿತ್ತು. ಜೊತೆಗೆ ಕರ್ನಾಟಕ ಕೇರಳಕ್ಕೆ ನೋಟಿಸ್ ಜಾರಿ ಮಾಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದ ಅಧೀನದ ಟ್ರೇಡ್ ಮಾರ್ಕ್ಗಳ ರಿಜಿಸ್ಟ್ರಿ ಕೇರಳ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅಂತಿಮವಾಗಿ ಕೆಎಸ್ಆರ್ಟಿಸಿ ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆಯ ಆಧಾರದಲ್ಲಿ ಟ್ರೇಡ್ ಮಾರ್ಕ್ ರಿಜಿಸ್ಟ್ರಿ ಕೇರಳ ಸರ್ಕಾರಕ್ಕೆ ಕೆಎಸ್ಆರ್ಟಿಸಿ ಟ್ರೇಡ್ ಮಾರ್ಕ್ ನೀಡಿದೆ. ಸದ್ಯ ಈ ಬಗ್ಗೆ ಕೇರಳ ಸಾರಿಗೆ ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.)
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ