ಬೆಂಗಳೂರು (ಮಾ. 25): ಕೇಂದ್ರ ಸರ್ಕಾರದ ಭೂ ಸುಧಾರಣಾ ಮಸೂದೆಗಳನ್ನು ವಾಪಾಸ್ ಪಡೆಯುವಂತೆ ಒತ್ತಾಯಿಸಿ ನಾಳೆ (ಮಾರ್ಚ್ 26)ಭಾರತ್ ಬಂದ್ಗೆ ಕರೆ ನೀಡಲಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಾಳೆಗೆ 4 ತಿಂಗಳಾಗುತ್ತದೆ. ಹೀಗಾಗಿ, ನಾಳೆ ಭಾರತ್ ಬಂದ್ಗೆ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕರೆ ನೀಡಿದೆ. ಕರ್ನಾಟಕದಲ್ಲೂ ಭಾರತ್ ಬಂದ್ ಯಶಸ್ವಿಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸಂಯುಕ್ತ ಹೋರಾಟ- ಕರ್ನಾಟಕ ಸಮಿತಿ ವತಿಯಿಂದ ಮನವಿ ಮಾಡಲಾಗಿದೆ.
ಕರ್ನಾಟಕದಲ್ಲೂ ಬಂದ್ ಯಶಸ್ವಿಗೊಳಿಸುವಂತೆ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಮನವಿ ಮಾಡಲಾಗಿದೆ. ರಾಜ್ಯದ ಎಲ್ಲ ನಾಗರಿಕರು ಬಂದ್ಗೆ ಬೆಂಬಲ ಸೂಚಿಸುವಂತೆ ಸಂಯುಕ್ತ ಹೋರಾಟ ಕರ್ನಾಟಕದ ಸಂಯೋಜಕ ಮತ್ತು ರೈತ ಮುಖಂಡ ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ. ಮಾರ್ಚ್ 26ಕ್ಕೆ ದೆಹಲಿ ಸುತ್ತಮುತ್ತ ರೈತರ ಚಳುವಳಿ ಆರಂಭವಾಗಿ 4 ತಿಂಗಳು ಕಳೆಯುತ್ತದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರೈತರ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಹೀಗಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಭಾರತದಾದ್ಯಂತ ಬಂದ್ ಗೆ ಕರೆ ನೀಡಿದೆ.
ರಾಜ್ಯದ ಎಲ್ಲ ನಾಗರೀಕರು ಬಂದ್ಗೆ ಬೆಂಬಲ ಸೂಚಿಸಬೇಕು. ಜೊತೆಗೆ ವ್ಯಾಪಾರಸ್ಥರು, ಕಾರ್ಮಿಕರು, ಆಟೋ ಚಾಲಕರು, ಸೇರಿದಂತೆ ಎಲ್ಲ ಉದ್ದಿಮೆಗಳು ಸ್ವಯಂಪ್ರೇರಿತರಾಗಿ ಬಂದ್ ಗೆ ಬೆಂಬಲ ಸೂಚಿಸಬೇಕು. ಬೆಂಬಲ ಸೂಚಿಸುವ ಮೂಲಕ ಅನ್ನದಾರಿಗೆ ಒತ್ತಾಸೆಯಾಗಿ ನಿಲ್ಲಬೇಕು. ಅನ್ನದಾತನನ್ನು ಉಳಿಸಿಕೊಳ್ಳಬೇಕು, ಎಲ್ಲ ಕನ್ನಡಪರ ಸಂಘಟನೆಗಳು ಕೂಡ ಬಂದ್ಗೆ ಬೆಂಬಲ ಸೂಚಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸಿದೆ.
ಇದನ್ನೂ ಓದಿ: Coronavirus Vaccine: ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮನ; ಈ ವಾರದೊಳಗೆ ಮತ್ತೆ 12 ಲಕ್ಷ ಡೋಸ್ ಲಭ್ಯ
ರೈತರು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬೀದಿ ಬದಿ ವ್ಯಾಪಾರಿಗಳಿಂದ ಕೇವಲ ನೈತಿಕ ಬೆಂಬಲ ವ್ಯಕ್ತವಾಗಿದೆ. ಬೀದಿ ವ್ಯಾಪಾರಿಗಳು ಕೋವಿಡ್ ನಿಂದ ಸಂಕಷ್ಟದಲ್ಲಿದ್ದಾರೆ. ರೈತರ ಹೋರಾಟಕ್ಕೆ ಬೀದಿ ಬದಿ ವ್ಯಾಪಾರಿಗಳ ಬೆಂಬಲವಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ರಂಗಸ್ವಾಮಿ ಹೇಳಿದ್ದಾರೆ.
ನಾಳೆ ರೈತರು ಭಾರತ್ ಬಂದ್ಗೆ ಕರೆ ನೀಡಿದ್ದಾರೆ. ಅದಕ್ಕೆ ರಾಷ್ಟ್ರೀಯ ವಾಹನ ಚಾಲಕರ ಒಕ್ಕೂಟದಿಂದ ಸಂಪೂರ್ಣ ಬೆಂಬಲ ನೀಡಲಾಗುತ್ತದೆ. ದೇಶದ ಅನ್ನದಾತರಿಗೆ ಅನ್ಯಾಯವಾದ್ರೆ ಸಹಿಸುವುದಕ್ಕೆ ಆಗೋದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ. ನಾಳೆ ನಾವು ವಾಣಿಜ್ಯ ಬಳಕೆಯ ವಾಹನಗಳನ್ನು ರೋಡಿಗಿಳಿಸುವುದಿಲ್ಲ ಎಂದು ರಾಷ್ಟ್ರೀಯ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ಸದಾನಂದ ಸ್ವಾಮಿ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ