ಬೆಂಗಳೂರು(ಡಿ.08): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ. ದೇಶಾದ್ಯಂತ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ರಾಜ್ಯ ಕಾಂಗ್ರೆಸ್ ನಾಯಕರು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಇನ್ನೂ ಮೊದಲಾದ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರ. ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದೆ. ಅವರು ಕೃಷಿ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದ್ದಾರೆ. ಎಪಿಎಂಸಿ, ಲೇಬರ್ ಆ್ಯಕ್ಟ್‌ಗೆ ತಿದ್ದುಪಡಿ ತಂದಿದ್ದಾರೆ. ಕರ್ನಾಟಕದಲ್ಲೂ ಲೇಬರ್ ಆ್ಯಕ್ಟ್, ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನುಗಳಿಗೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಹೇಳಿದರು.
Bharath Bandh: ಸೆಕ್ಷನ್ 144 ನಡುವೆಯೂ ವಿಧಾನಸೌಧದ ಬಳಿ ಕಪ್ಪು ಬಾವುಟ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ
ಮುಂದುವರೆದ ಅವರು, ಕೇಂದ್ರ ಸರ್ಕಾರ ನೆಪ ಮಾತ್ರಕ್ಕೆ ಅಷ್ಟೇ ಇದೆ. ಬಿಜೆಪಿ ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡ್ತಿದೆ. ದೇಶದಲ್ಲಿ ಹಲವು ರಾಜಕೀಯ ಪಕ್ಷಗಳು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ದೇಶದಲ್ಲಿ ರೈತರ ನಾಶ ಮಾಡಲು ಹೊರಟಿದೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ. ರೈತ ಸಮುದಾಯದ ವಿರುದ್ಧವಾಗಿ ಕೇಂದ್ರ ಸರ್ಕಾರ ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿ ಕೊಡುತ್ತಿದ್ದಾರೆ. ರೈತರ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಕಾಂಗ್ರೆಸ್ ರೈತರ ಜೊತೆಗೆ ಇದೆ. ಮುಂದೆ ಕೂಡ ರೈತರ ವಿಚಾರದಲ್ಲಿ ಹೋರಾಟ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ