ಬೆಂಗಳೂರು (ಅ.23): ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಆಘಾತದಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಮಳೆ ಆರಂಭವಾಗಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಲಿದ್ದಾರೆ.
ಬಿಎಸ್ವೈ ಮಧ್ಯಾಹ್ನ 12ಗಂಟೆಗೆ ವಿಧಾನಸೌಧದಲ್ಲಿ ವೀಡಿಯೋ ಸಂವಾದ ಆರಂಭಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗುತ್ತಿದೆ, ಮಳೆಯಿಂದ ಆದ ಅನುಹುತಗಳ ಬಗ್ಗೆ ಬಿಎಸ್ವೈ ವಿಡಿಯೋ ಕಾಲ್ ವೇಳೆ ಮಾಹಿತಿ ಪಡೆಯಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮತ್ತೆ ವರುಣ ಆರ್ಭಟಿಸುತ್ತಿದ್ದಾನೆ. ಹೀಗಾಗಿ ಅನೇಕ ಗ್ರಾಮಗಳು ಜಲಾವೃತಗೊಂಡಿವೆ. ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡುವಂತೆ ಅವರು ಸೂಚನೆ ನೀಡುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದಿಂದ ಭಾರೀ ಮಳೆಯಾಗಿ ರಸ್ತೆಗಳೆಲ್ಲ ಜಲಾವೃತವಾಗಿತ್ತು. ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಗದ್ದೆ, ತೋಟಗಳಲ್ಲಿ ನಿಂತ ನೀರಿನಿಂದ ರೈತರು ಕಂಗಾಲಾಗಿದ್ದಾರೆ.
ಇದನ್ನೂ ಓದಿ: ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ; ಆತಂಕದಲ್ಲಿ ಉತ್ತರ ಕರ್ನಾಟಕದ ಜನರು
ಕರಾವಳಿಯ ಮಂಗಳೂರು, ಸುಳ್ಯ, ಉಡುಪಿ, ಬೆಳ್ತಂಗಡಿ ಭಾಗದಲ್ಲೂ ಮಳೆಯ ಅಬ್ಬರ ಜೋರಾಗಿತ್ತು. ಇದರ ಜೊತೆಗೆ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ಭಾಗದ ಜನರು ಆತಂಕಕ್ಕೊಳಗಾಗಿದ್ದಾರೆ.
(ವರದಿ: ಕೃಷ್ಣ ಜಿವಿ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ