ನಿಗದಿತ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಪೂರ್ಣಗೊಳಿಸಿ: ಕೇಂದ್ರ ಸಚಿವರ ಸಲಹೆ

ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ನೀರು ಪೂರೈಕೆಯ ನಲ್ಲಿಗಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​

 • Share this:
  ಬೆಂಗಳೂರು: (ಜುಲೈ 13) ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದರು.

  ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರು ಸಲಹೆ ನೀಡಿದರು. ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ನೀರು ಪೂರೈಕೆಯ ನಲ್ಲಿಗಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.

  ಈ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆ. ಅಂತೆಯೇ ರಾಜ್ಯದಲ್ಲಿ ಆದ್ಯತಾ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೀರು ಪೂರೈಕೆಯ ನಲ್ಲಿಗಳ ಸಂಪರ್ಕಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಸಚಿವರು ತಿಳಿಸಿದರು.

  ನಳ ಸಂಪರ್ಕ ನೀಡುವುದರೊಂದಿಗೆ ಪೂರೈಸುವ ನೀರಿನ ಗುಣಮಟ್ಟವನ್ನೂ ಖಾತರಿ ಪಡಿಸುವಂತೆ ಸಚಿವರು ಸಲಹೆ ನೀಡಿದರು. ರಾಜ್ಯದಲ್ಲಿ ಯೋಜನೆಯ ಪ್ರಗತಿಯ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ ತಲಾ 55 ಎಲ್ ಪಿ ಸಿ ಡಿ ಶುದ್ಧ ನೀರು ಒದಗಿಸುವ ಗುರಿ ಇದೆ. ಈ ಯೋಜನೆಯಡಿ 2021-22 ನೆ ಆರ್ಥಿಕ ವರ್ಷದಲ್ಲಿ 25.17 ಲಕ್ಷ ಮನೆಗಳಿಗೆ ನೀರು ಪೂರೈಕೆ ನಲ್ಲಿ ಸಂಪರ್ಕ ಒದಗಿಸಲು ಉದ್ದೇಶಿಸಲಾಗಿದೆ. 2022-23 ರಲ್ಲಿ 27.15 ಲಕ್ಷ ಹಾಗೂ 2023 ಡಿಸೆಂಬರ್ ಅಂತ್ಯದ ವೇಳೆಗೆ 10.72 ಲಕ್ಷ ಮನೆಗಳಿಗೆ ನೀರು ಪೂರೈಕೆಯ ನಲ್ಲಿಯ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

  ಆದ್ಯತಾ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ 2000 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಯೋಜನೆ ರೂಪಿಸಲಾಗಿದ್ದು ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿಯೂ ಬಹುಗ್ರಾಮ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
  ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

  ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್​  ಶೇಖಾವತ್​ ಅವರು ಮಂಗಳವಾರ ರಾಜ್ಯ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿತ್ತು. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ ಹಾಗೂ ಅದರ ಸಂಪೂರ್ಣ ಸಹಕಾರ ಕೋರಿ ಕೇಂದ್ರ ಸಚಿವರ ಬಳಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಷಯ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿತ್ತು.

  ಇದನ್ನೂ ಓದಿ: Assam| ಅಸ್ಸಾಂನಲ್ಲಿ ಗೋಹತ್ಯೆ ಮಸೂದೆ ಮಂಡನೆ, ದೇವಾಲಯದ 5 ಕಿಮೀ ಸುತ್ತ ಮಾಂಸ ಮಾರಾಟ ನಿಷೇಧ

  ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಅವರಿಗೆ ಪತ್ರ ಬರೆದು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದ ಯಡಿಯೂರಪ್ಪ ಅವರು ಇದರಿಂದ ಅವರಿಗೆ ಉಂಟಾಗಿರುವ ಡ್ಯಾಮೇಜ್​ ಕಂಟ್ರೋಲ್​ ಮಾಡಲು ದಾರಿ ಹುಡುಕುತ್ತಿದ್ದರು. ಕೇಂದ್ರ ಸರ್ಕಾರವು ಈ ಯೋಜನೆಯ ಬೆನ್ನಿಗೆ ನಿಂತರೆ ಬಹುದಿನಗಳ ಕೆಲಸವನ್ನು ಯಡಿಯೂರಪ್ಪ ಅವರು ಸಾಧಿಸಿದಂತೆ ಆಗುತ್ತದೆ ಎನ್ನುವ ಲೆಕ್ಕಾಚಾರವಿತ್ತು ಆದರೆ ಸದ್ಯಕ್ಕೆ ಈ ವಿಚಾರದ ಕುರಿತು ಯಾವ ರೀತಿಯ ಮಾತುಕತೆ ಆಗಿದೆ ಎನ್ನುವುದು ಕಾದು ನೋಡಬೇಕಿದೆ. ಕೇಂದ್ರ ಸಚಿವರು ಮೇಕೆದಾಟು ವಿಚಾರದಲ್ಲಿ ಯಡಿಯೂರಪ್ಪ ಅವರ ಕೈ ಹಿಡಿಯುತ್ತಾ ಬಿಡುತ್ತಾರಾ, ಇದೇ ಮುಂದಿರುವ ಸವಾಲು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:HR Ramesh
  First published: