ಚಿತ್ರದುರ್ಗ(ಮಾ.22): ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ (Karnataka Assembly Elections) ಸಂದರ್ಭದಲ್ಲಿ ಅಕ್ರಮ ಮದ್ಯ ಸಾಗಾಣಿಕೆ (Illegal Liquor Supply) ತಡೆ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟಿ, ನ್ಯಾಯಸಮ್ಮತ ಚುನಾವಣೆಗೆ ಸಹಕಾರ ನೀಡುವಂತೆ ನೆರೆಯ ಆಂಧ್ರಪ್ರದೇಶ (Andhra Pradesh) ರಾಜ್ಯದ ಅನಂತಪುರ ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಕೈಗೊಳ್ಳಬೇಕಿರುವ ಪ್ರಾಥಮಿಕ ಹಂತದ ಮುಂಜಾಗ್ರತಾ ಕ್ರಮಗಳ ಕುರಿತು ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: CBI Notice: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಬಿಐ ಶಾಕ್!
ಶೀಘ್ರದಲ್ಲಿಯೇ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದ್ದು, ಈ ಸಂದರ್ಭದಲ್ಲಿ ಚುನಾವಣೆ ಸಂಬಂಧ ಜರುಗಬಹುದಾದ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸುಮಾರು 35 ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಆಂಧ್ರಪ್ರದೇಶದೊಂದಿಗೆ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 150 ಕಿ.ಮೀ. ಗಡಿ ಪ್ರದೇಶ ಹಂಚಿಕೊಂಡಿದ್ದು, ಚುನಾವಣೆ ಸಂದರ್ಭದಲ್ಲಿ ನೆರೆಯ ರಾಜ್ಯದಿಂದ ಈ ಜಿಲ್ಲೆಯೆಡೆಗೆ ಅಕ್ರಮವಾಗಿ ಮದ್ಯ, ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ ಮಾಡುವುದು, ಗೂಂಡಾಗಳು ಜಿಲ್ಲೆಯೊಳಗೆ ಆಗಮಿಸಿ, ಚುನಾವಣೆಯ ಮೇಲೆ ಪ್ರಭಾವ ಬೀರುವಂತಹ ಸಾಧ್ಯತೆಗಳಿರುತ್ತವೆ.
ಹಾಗಾಗಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವ ಸಲುವಾಗಿ ಆಂಧ್ರದ ಗಡಿಯಲ್ಲಿ ಬರುವ ಮೊಳಕಾಲ್ಮೂರು ತಾಲ್ಲೂಕಿನ ಉಡೇವು, ಮಲ್ಲಸಮುದ್ರ, ಯದ್ದಲುಬೊಮ್ಮನಹಟ್ಟಿ, ಪಾತಪ್ಪನಗುಡಿ, ಕಣಪುಪ್ಪೆ. ಚಳ್ಳಕೆರೆ ತಾಲ್ಲೂಕಿನ ನಾಗಪ್ಪನಹಳ್ಳಿ ಗೇಟ್. ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿ ಹಾಗೂ ಪಿ.ಡಿ. ಕೋಟೆ ಕ್ರಾಸ್ ಸೇರಿದಂತೆ ಒಟ್ಟು 08 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ತೀವ್ರ ನಿಗಾ ವಹಿಸಲಾಗುವುದು. ಅದೇ ರೀತಿ ಆಂಧ್ರಪ್ರದೇಶ ರಾಜ್ಯದ ವ್ಯಾಪ್ತಿಯಲ್ಲಿಯೂ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ, ಅಕ್ರಮವಾಗಿ ಅಲ್ಲಿಂದ ಮದ್ಯ ಸಾಗಾಣಿಕೆಯಾಗದಂತೆ ಹಾಗೂ ಮತದಾರರಿಗೆ ಹಂಚಿಕೆ ಮಾಡುವ ಸಲುವಾಗಿ ವಿವಿಧ ಸಾಮಗ್ರಿಗಳನ್ನು ಸಾಗಿಸದಂತೆ ನಿಗಾ ವಹಿಸಬೇಕು.
ಇದನ್ನೂ ಓದಿ: Janardhan Reddy: ಚುನಾವಣೆಗೂ ಮುನ್ನವೇ ಭರ್ಜರಿ ಯೋಜನೆ ಘೋಷಿಸಿದ ಗಣಿ ಧಣಿ
ಇನ್ನೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಹಾಗೂ ಚುನಾವಣೆಯ ಮೇಲೆ ಪ್ರಭಾವ ಬೀರದಂತೆ ಮಾಡಲು, ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿ ಆ ರಾಜ್ಯದ ಗಡಿ ಪ್ರದೇಶದಲ್ಲಿ ಗುರುತಿಸಲಾದ ರೌಡಿಶೀಟರ್‍ಗಳನ್ನು ಪಟ್ಟಿ ಮಾಡಿ, ಅವರ ಬಗ್ಗೆಯೂ ವಿಶೇಷ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳು ಕ್ರಮ ವಹಿಸಬೇಕು. ಆಂಧ್ರಪ್ರದೇಶದ ವ್ಯಕ್ತಿಗಳು, ಈ ಭಾಗದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸದಂತೆ ನಿಗಾ ವಹಿಸುವುದು. ಆಂಧ್ರ ಗಡಿ ಪ್ರದೇಶ ವ್ಯಾಪ್ತಿಯಲ್ಲಿನ ಮದ್ಯದಂಗಡಗಳಲ್ಲಿ ಸರಾಸರಿಗಿಂತಲೂ ಹೆಚ್ಚಿನ ಮದ್ಯ ವಹಿವಾಟು ನಡೆಯುತ್ತಿದ್ದಲ್ಲಿ, ಅಂತಹ ವಹಿವಾಟಿನ ಬಗ್ಗೆಯೂ ನಿಗಾ ವಹಿಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ನೆರೆಯ ರಾಜ್ಯದ ಅಧಿಕಾರಿಗಳು ಇಲ್ಲಿನ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಕೋರಿದರು.
ಇದಕ್ಕೆ ಪ್ರತಿಯಾಗಿ ಸ್ಪಂದಿಸಿದ ಅನಂತಪುರ ಜಿಲ್ಲೆಯ ಕಲೆಕ್ಟರ್ ನಾಗಲಕ್ಷ್ಮಿ ಅವರು, ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸಲು ಬೇಕಾದ ಎಲ್ಲ ಸಹಕಾರ ನೀಡಲಾಗುವುದು, ಈ ನಿಟ್ಟಿನಲ್ಲಿ ಜಿಲ್ಲೆಯ ಗಡಿ ವ್ಯಾಪ್ತಿಯಲ್ಲಿಯೂ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಅಕ್ರಮ ಮದ್ಯ ಮತ್ತು ಸಾಮಗ್ರಿಗಳ ಸಾಗಾಣಿಕೆ ತಡೆಗೆ ತೀವ್ರ ನಿಗಾ ವಹಿಸಲಾಗುವುದು ಎಂದು ಹೇಳಿದರು.
ವರದಿ: ವಿನಾಯಕ ತೊಡರನಾಳ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ