ಯಾದಗಿರಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಬಂಡಾಯ ಅಭ್ಯರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಯವರೆಗೆ ಸೈಲೆಂಟ್ ಆಗಿದ್ದ ಟಿಕೆಟ್ ಆಕಾಂಕ್ಷಿಗಳು ತಮ್ಮ ಕ್ಷೇತ್ರದಲ್ಲಿ ತಾವೇ ಮುಂದಿನ ಅಭ್ಯರ್ಥಿ ಅನ್ನೋ ರೀತಿಯಲ್ಲಿ ಕೆಲಸ ಮಾಡಿ ಮತದಾರರ ಮನವೊಲಿಲು ಪ್ರಯತ್ನ ಮಾಡಿದ್ದರು. ಇದೀಗ ಟಿಕೆಟ್ ಕೈ ತಪ್ಪುತ್ತಿದ್ದಂತೆ ಪಕ್ಷದ ವಿರುದ್ಧವೇ ರೆಬೆಲ್ ಆಗಿದ್ದಾರೆ. ಇದರ ಬಿಸಿ ಕಾಂಗ್ರೆಸ್ ಪಕ್ಷಕ್ಕೆ ಸದ್ಯ ದೊಡ್ಡ ಮಟ್ಟದಲ್ಲಿ ತಟ್ಟುತ್ತಿದೆ.
ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಡಾ.ಎ.ಬಿ ಮಾಲಕ ರೆಡ್ಡಿ (A B Malaka Reddy) ಮತ್ತು ಪುತ್ರಿ ಡಾ. ಅನುರಾಗ ಮಾಲಕ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಇವರಿಬ್ಬರೂ ಸೇರಿದಂತೆ ಕಾಂಗ್ರೆಸ್‌ನಿಂದ ಒಟ್ಟು 17 ಮಂದಿ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಅಪ್ಪ ಮಗಳು ಇಬ್ಬರಿಗೂ ಟಿಕೆಟ್ ಸಿಗದೇ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದ್ದು, ಇದರ ವಿರುದ್ಧ ಸಿಡಿದೆದ್ದಿರುವ ಎಬಿ ಮಾಲಕ ರೆಡ್ಡಿ ಪಕ್ಷಕ್ಕೆ ಟಾಂಗ್ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದ ಎಬಿ ಮಾಲಕ ರೆಡ್ಡಿ, ತನಗೆ ಅಥವಾ ಮಗಳಿಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ಒತ್ತಡ ಹಾಕಲು ಪ್ರಯತ್ನಿಸಿದ್ದರು. ಇದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಟಿಕೆಟ್ ನೀಡುವಂತೆ ದುಂಬಾಲು ಬಿದ್ದಿದ್ದರು. ಆದರೆ ತನ್ನ ಲೆಕ್ಕಾಚಾರ ಉಲ್ಟಾ ಆಗಿದ್ದು, ಹೀಗಾಗಿ ತೀವ್ರ ನಿರಾಸೆ ಉಂಟಾಗಿದೆ.
ಈ ಮಧ್ಯೆ ಮಾಲಕ ರೆಡ್ಡಿ ತನ್ನ ಬೆಂಬಲಿಗರ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದು, ಇಂದು ಸಂಜೆ ತನ್ನ ಬೆಂಬಲಿಗರು ಮತ್ತು ಕ್ಷೇತ್ರದ ಜನತೆಯ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಪಕ್ಷೇತರ ಅಭ್ಯರ್ಥಿಯಾಗಿ ಇಲ್ಲವೇ ಪ್ರಾದೇಶಿಕ ಪಕ್ಷದಿಂದ ಸ್ಪರ್ಧೆ ಮಾಡುವ ಬಗ್ಗೆ ಜನರ ಜೊತೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ವೇಳೆ ಮಾಲಕ ರೆಡ್ಡಿ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಮುಂದಾಗಿ ಪಕ್ಷೇತರ ಅಥವಾ ಪ್ರಾದೇಶಿಕ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾದರೆ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬೀಳು ಸಾಧ್ಯತೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ