ನವದೆಹಲಿ, ಆ. 31: ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಮೇಕೆದಾಟು (Mekedatu) ಬಳಿ ಅಣೆಕಟ್ಟು ನಿರ್ಮಿಸುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ಸಭೆ ನಡೆಯಲಿದೆ. ಸಭೆಯಲ್ಲಿ ಕರ್ನಾಟಕ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣದ ಬಗ್ಗೆ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ (Detail Project Report) ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಎಂದಿನಂತೆ ತಮಿಳುನಾಡು ಕರ್ನಾಟಕದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮತ್ತು ವಿಸ್ತೃತ ಯೋಜನಾ ವರದಿಯನ್ನು ವಿರೋಧಿಸಲಿದೆ.
ಆಗಸ್ಟ್ 25ರಂದು ದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gagendra Sing Shekawath) ಅವರನ್ನು ಭೇಟಿ ಮಾಡಿ ರಾಜ್ಯದ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಮೇಕೆದಾಟು ಯೋಜನೆ ಬಗ್ಗೆ ಒತ್ತು ನೀಡಿದ್ದರು. ಕೇಂದ್ರ ಸಚಿವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, 'ಮೇಕೆದಾಟು ಡಿಪಿಆರ್ ವಿಷಯವೇ ಮುಂದಿನ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ಅಜೆಂಡಾ ಆಗಿರಲಿದೆ' ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಹತ್ವದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಕರ್ನಾಟಕದ ಪಾಲಿಗೆ ಅಪಾರವಾದ ನಿರೀಕ್ಷೆ ಹುಟ್ಟುಹಾಕಿದೆ. ಇಂದಿನ ಸಭೆಯಲ್ಲಿ ತಮಿಳುನಾಡಿನ ವಿರೋಧದ ನಡುವೆಯೂ ಒಂದೊಮ್ಮೆ ಕರ್ನಾಟಕದ ಡಿಪಿಆರ್ಗೆ ಸಭೆ ಒಪ್ಪಿಗೆ ನೀಡಿದರೆ ಬಳಿಕ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗ (Central Water Commission) ಅನುಮೋದನೆಗೆ ಕಳುಹಿಸಿಕೊಡಲಾಗುತ್ತದೆ.
ಮೇಕೆದಾಟು ಯೋಜನೆಗೆ ಅಂತಿಮ ಅನುಮೋದನೆ ನೀಡಬೇಕಿರುವುದು ಕೇಂದ್ರ ಜಲ ಆಯೋಗ. ಈ ಹಿನ್ನೆಲೆಯಲ್ಲಿ ಇದು ಅಂತಿಮ ಘಟ್ಟ ಆಗಿರುವುದರಿಂದ ತಮಿಳುನಾಡು ತೀವ್ರವಾಗಿ ವಿರೋಧಿಸಲಿದೆ ಮತ್ತು ಇಂದಿನ ಸಭೆಗೆ ಹೆಚ್ಚು ಮಹತ್ವ ಬಂದಿದೆ. ಇದೇ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮತ್ತೊಂದು ದೂರು ಸಲ್ಲಿಸಿದೆ. '2019ರಂದು ಮೇಕೆದಾಟು ಅಣೆಕಟ್ಟು ಯೋಜನೆ ಬಗ್ಗೆ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ ಅನ್ನು ವಜಾಗೊಳಿಸಲು ಕೇಂದ್ರ ಜಲ ಆಯೋಗಕ್ಕೆ ಸೂಚನೆ ನೀಡುವಂತೆ' ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದೆ.
ಇದನ್ನೂ ಓದಿ: Afghanistan- ಎರಡು ದಶಕದ ಬಳಿಕ ಅಫ್ಘಾನಿಸ್ತಾನದಿಂದ ಸಂಪೂರ್ಣ ಕಾಲ್ತೆಗೆದ ಅಮೆರಿಕ ಸೇನೆ
ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ
ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆದಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದಿದ್ದರು.
ವಿಶೇಷ ರಜೆ ಅರ್ಜಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದ ಅವರು ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಕುರಿತು ಹಾಗೂ ತಮಿಳುನಾಡು ಮಧುರೈ ನ್ಯಾಯಾಲಯದಲ್ಲಿ ಪ್ರಕರಣವೊಂದು ದಾಖಲಾಗಿದೆ. ಪ್ರಕರಣ ಮಧುರೈ ವ್ಯಾಪ್ತಿಗೆ ಒಳಪಡದಿರುವುದರಿಂದ ಪ್ರಕರಣವನ್ನು ಕೈಬಿಡಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಉಪಸ್ಥಿತರಿದ್ದರು.
ವರದಿ: ಧರಣೀಶ ಬೂಕನಕೆರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ