ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್‌, ಕುಲಪತಿಗಳಿಗೆ ಡಿಸಿಎಂ ಸಲಹೆ; ಶೈಕ್ಷಣಿಕ ಕ್ಯಾಲೆಂಡರ್‌ ಬಗ್ಗೆ ಸಮಾಲೋಚನೆ

ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಸೂಕ್ತವಾದ ಕಾರ್ಯ ಚೌಕಟ್ಟು ರೂಪಿಸಲು ವಿಷಯವಾರು ಸಮಿತಿ ರಚನೆ ಮಾಡುವಂತೆಯೂ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ್ ತಿಳಿಸಿದ್ದಾರೆ.

ಅಶ್ವಥ್ ನಾರಾಯಣ್.

ಅಶ್ವಥ್ ನಾರಾಯಣ್.

  • Share this:
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸಿನಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸುಗಳನ್ನು ಆರಂಭ ಮಾಡುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಕುಲಪತಿಗಳಿಗೆ ಸಲಹೆ ನೀಡಿದ್ದಾರೆ. 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಎಲ್ಲ ಕುಲಪತಿಗಳ ಜತೆ ಬೆಂಗಳೂರಿನಲ್ಲಿ ಮಂಗಳವಾರ ವರ್ಚುಯಲ್‌ ಚರ್ಚೆ ನಡೆಸಿದ ನಂತರ ಡಿಸಿಎಂ ಅವರು ಮಾಧ್ಯಮ ಗಳಿಗೆ ಈ ಮಾಹಿತಿ ನೀಡಿದರು. ಕೋವಿಡ್‌ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸುಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿವಿಗಳಿಗೆ ಇದೊಂದು ಸುವರ್ಣಾವಕಾಶ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭ ಮಾಡುವ ಮೂಲಕ ವಿವಿಗಳು ಪದವಿ ವ್ಯಾಸಂಗದ ಅಭಿಲಾಶೆಯುಳ್ಳ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದರು.

ಎನ್‌ಇಪಿ ಜಾರಿಗೆ ವಿಷಯವಾರು ಸಮಿತಿ ರಚನೆ:

ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಸೂಕ್ತವಾದ 'ಕಾರ್ಯ ಚೌಕಟ್ಟು' ರೂಪಿಸಲು ವಿಷಯವಾರು ಸಮಿತಿ ರಚನೆ ಮಾಡುವಂತೆಯೂ ಕುಲಪತಿಗಳಿಗೆ ಸೂಚನೆ ನೀಡಲಾಗಿದ್ದು, ಜುಲೈ 15ರೊಳಗೆ ಈ ಸಮಿತಿಗಳು ವರದಿಗಳನ್ನು ಸಲ್ಲಿಸಬೇಕೆಂದು ತಿಳಿಸಲಾಗಿದೆ ಎಂದು ಡಿಸಿಎಂ ಹೇಳಿದರು.

ಇನ್ನು ಸದ್ಯಕ್ಕೆ ನಮ್ಮನ್ನು ಕಾಡುತ್ತಿರುವ ಈ ವೈರಸ್‌ ಎಷ್ಟು ಕಾಲ ಇರುತ್ತೋ ಇಲ್ಲವೋ ಗೊತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆನ್‌ಲೈನ್‌ ಮತ್ತು ಆಫ್ ಲೈನ್‌ ನಲ್ಲಿ ಕಲಿಯಲು ಅವಕಾಶ ಇರಲೇಬೇಕು. ಅದಕ್ಕೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳು ವಿದ್ಯಾಸಂಸ್ಥೆಗಳಲ್ಲಿ ಇರಬೇಕು. ಡಿಜಿಟಲ್‌ನಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವರ್ಚಯುಲ್‌ ಮೂಲಕ ಬೋಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಅಕ್ಟೋಬರ್‌ನಿಂದ ಹೊಸ ಶೈಕ್ಷಣಿಕ ವರ್ಷ:

ಎಲ್ಲ ವಿವಿಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಕ್ಟೋಬರ್‌ ಮೊದಲ ವಾರದಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭವಾಗುತ್ತವೆ. ಮೊದಲ ವರ್ಷದ ಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭ ಮಾಡುವಂತೆ ಕುಲಪತಿಗಳಿಗೆ ತಿಳಿಸಲಾಗಿದೆ.

ಇದನ್ನೂ ಓದಿ: CAA Act: ಪೌರತ್ವ ಕಾಯ್ದೆಯ ಬಗೆಗಿನ ಅಫಿಡವಿಟ್​ಗೆ ಪ್ರತಿಕ್ರಿಯಿಸಲು ಮುಸ್ಲೀಂ ಲೀಗ್​ಗೆ 2 ವಾರ ಗಡುವು ನೀಡಿದ ಸುಪ್ರೀಂ!

ಕೆಲ ಕಡೆ ಪರೀಕ್ಷೆಗಳು ನಡೆದಿವೆ, ಇನ್ನು ಕೆಲವೆಡೆ ಆಗಿಲ್ಲ. ಈ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಇನ್ನು ಈಗಾಗಲೇ ದೈನಂದಿನ ತರಗತಿಗಳು ಶುರುವಾಗಿದ್ದು, ಅವುಗಳನ್ನು ಕೂಡ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಆಧಾರದಲ್ಲೇ ನಡೆಸಲಾಗುವುದು ಎಂದ ಅವರು, ಮುಂದಿನ ವರ್ಷದ ಪರೀಕ್ಷೆಗಳನ್ನು ಹೇಗೆ ನಡೆಸಬೇಕು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳು ಪೈಪೋಟಿ ನಡೆಸಬೇಕಾದರೆ ಕಲಿಕೆ ಮತ್ತು ಬೋಧನೆಯಲ್ಲಿ ಗುಣಮಟ್ಟ ಇರಬೇಕು ಎಂಬ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು ಎಂದು ಅಶ್ವತ್ಥ್​ ನಾರಾಯಣ್ ತಿಳಿಸಿದ್ದಾರೆ.

ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರೂ ಇನ್ನೂ ದೇವಾಲಯಗಳಲ್ಲಿ ಅರ್ಚನೆ ಮಾಡಬಹುದು; ತಮಿಳುನಾಡು ಸರ್ಕಾರ

ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ವಿದ್ಯಾಭ್ಯಾಸ ನಡೆಸುವ ನಿಟ್ಟಿನಲ್ಲಿ ಎಲ್ಲರಿಗೂ ಟ್ಯಾಬ್‌ ನೀಡಲಾಗುತ್ತಿದೆ. ಸ್ಮಾರ್ಟ್‌ ಕ್ಲಾಸ್‌ಗಳು ಶುರುವಾಗುತ್ತಿವೆ. ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಜಾರಿಗೆ ಬಂದಿದೆ ಎಂದು ಅವರು ಹೇಳಿದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:MAshok Kumar
First published: