ಬಾಗಲಕೋಟೆ (ನ. 10): ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲೇ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದಕ್ಕೆ ಅವರೇ ಸೋಲಿನ ಹೊರೆ ಹೊರಬೇಕು ಎಂಬ ವಿಚಾರವನ್ನು ಅಲ್ಲಗಳೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸೋಲಿನ ಹೊಣೆಯನ್ನು ಡಿಕೆ ಶಿವಕುಮಾರ್ ಯಾಕೆ ಹೊರಬೇಕು? ಯಾರೇ ಅಧ್ಯಕ್ಷರಾದರೂ ಅಷ್ಟೇ. ಸೋಲಿನ ಹೊಣೆಯನ್ನು ಅವರು ಹೊರಬೇಕಾದ ಅಗತ್ಯವಿಲ್ಲ. ಅಧ್ಯಕ್ಷರಾದ ತಕ್ಷಣ ಹೊಣೆ ಹೊರಬೇಕಾ? ಇದು ಜನರಲ್ ಎಲೆಕ್ಷನ್ ಅಲ್ಲ, ಉಪ ಚುನಾವಣೆಯಷ್ಟೇ. 2023ಕ್ಕೆ ಜನರಲ್ ಎಲೆಕ್ಷನ್ ಬರುತ್ತದೆ. ಆಗ ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ ಎದುರು ಕಾಂಗ್ರೆಸ್ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಆರ್ಆರ್ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಶಿರಾದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇತ್ತು. ಆರ್ ಆರ್ ನಗರದಲ್ಲಿ ಒಳ್ಳೆಯ ಫೈಟ್ ಕೊಡುತ್ತೇವೆ ಎಂದುಕೊಂಡಿದ್ದೆವು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಕೊಟ್ಟ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ. ಜನರು ಕೊಟ್ಟ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ಸರ್ಕಾರದಲ್ಲಿರೋರು ಚುನಾವಣೆಯನ್ನು ನಿಷ್ಪಕ್ಷಪಾತ, ಮುಕ್ತವಾಗಿ ನಡೆಸಬೇಕು. ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಬೈ ಎಲೆಕ್ಷನ್ ಬಳಿಕ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುವ ತಮ್ಮ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನನಗೆ ಇರುವ ಮಾಹಿತಿ ಪ್ರಕಾರ ಈಗಲೂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದಿದ್ದಾರೆ. ತಾವು ಬಿಜೆಪಿ ಸೇರುವ ಸಲುವಾಗಿ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಪಾಪ, ಅವನಿಗೆ ರಾಜಕೀಯ ಪ್ರೌಢಿಮೆ ಬಂದಿಲ್ಲ. ಹಾಗಾಗಿ ನಾನು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸೋದಿಲ್ಲ ಎಂದಿದ್ದಾರೆ.
(ವರದಿ: ರಾಚಪ್ಪ ಬನ್ನಿದಿನ್ನಿ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ