ಡಿಕೆ ಶಿವಕುಮಾರ್ ಮನೆ ಮೇಲಿನ ದಾಳಿ ಬಿಜೆಪಿಯ ರಾಜಕೀಯ ದ್ವೇಷದ ಪರಮಾವಧಿ; ಸಿದ್ದರಾಮಯ್ಯ ಆಕ್ರೋಶ

Siddaramaiah: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲಿನ ದಾಳಿ ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತವನವನ್ನು ತೋರಿಸುತ್ತಿದೆ. ಇದು ಬಿಜೆಪಿಯ ರಾಜಕೀಯ ದುಷ್ಟತನದ ಪರಮಾವಧಿ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
    ಬೆಂಗಳೂರು (ಅ. 5): ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ ಹಾಗೂ ದೊಡ್ಡಾಲಹಳ್ಳಿಯಲ್ಲಿರುವ ಮನೆ ಮೇಲೂ ಸಿಬಿಐ ದಾಳಿ ನಡೆಸಲಾಗಿದೆ. ಜೊತೆಗೆ ಡಿಕೆಶಿ ಸಹೋದರ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಮನೆ ಬಳಿ ಜಮಾಯಿಸಿದ್ದಾರೆ. ರಾಜಕೀಯ ದ್ವೇಷದ ಕಾರಣಕ್ಕೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ, ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    'ಬಿಜೆಪಿ ಪಕ್ಷ ದ್ವೇಷ ರಾಜಕಾರಣ ಮಾಡುವುದು ಹೊಸತೇನಲ್ಲ. ಈ ಮೂಲಕ ಸಾರ್ವಜನಿಕರ ಗಮನ ಸೆಳೆಯುವುದನ್ನು ಆಗಾಗ ಮಾಡುತ್ತಲೇ ಇರುತ್ತದೆ. ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ಅದಕ್ಕೆ ತಾಜಾ ಉದಾಹರಣೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸುವ ಮೂಲಕ ಆರ್​ಆರ್​ ನಗರ ಮತ್ತು ಶಿರಾ ಉಪಚುನಾವಣೆಯ ವೇಳೆ ಮತದಾರರ ಗಮನವನ್ನು ತನ್ನತ್ತ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಾವು ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬಾರದೆಂದು ಈ ದಾಳಿ ನಡೆಸಿರುವ ಬಿಜೆಪಿಯ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.



    ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.



    ಡಿ.ಕೆ. ಶಿವಕುಮಾರ್ ಮನೆ ಜೊತೆಗೆ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಈಗಾಗಲೇ ಐಟಿ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳಿಂದ ಡಿಕೆಶಿ ವಿಚಾರಣೆ ನಡೆಸಲಾಗಿತ್ತು. ಸಿದ್ದರಾಮಯ್ಯನವರ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿಕೊಂಡು, ಬಹುಕೋಟಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಲೆಹಾಕಿದ್ದ ಐಟಿ ಮತ್ತು ಇಡಿ ಇಲಾಖೆ ಆ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಇದೇ ಕಾರಣಕ್ಕೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    Published by:Sushma Chakre
    First published: