ಬಾಯಿ ಬಿಟ್ಟರೆ ಬಣ್ಣಗೇಡು, ಕೈಲಾಗದ ನಾಯಕ ಗೋಳಾಟದಂತಿದೆ ಪ್ರಧಾನಿ ಮೋದಿ ಭಾಷಣ; ಸಿದ್ದರಾಮಯ್ಯ ಕಿಡಿ

ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದು:ಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  • Share this:
ಬೆಂಗಳೂರು (ಜೂನ್‌ 30); ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಗಳು ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ, ಕೈಲಾಗದ ನಾಯಕನ ಗೋಲಾಟದಂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕುಹಕವಾಡಿದ್ದಾರೆ.

ನಾಳೆಯಿಂದ ರಾಷ್ಟ್ರಾದ್ಯಂತ ಅನ್‌ಲಾಕ್‌-2 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 04 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ದೂರದರ್ಶನದ ಮೂಲಕ ಮಾತನಾಡಿದ್ದರು. ಅಸಲಿಗೆ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ಚೀನಾ ಸಂಘರ್ಷದಲ್ಲಿ ಮೃತಪಟ್ಟ 20 ಸೈನಿಕರ ಕುರಿತು, ಚೀನಾ ಸಂಘರ್ಷದ ಕುರಿತು, ಪೆಟ್ರೋಲ್-ಡೀಸೆಲ್‌ ಬೆಲೆ ಏರಿಕೆ ಕುರಿತು ಮಾತನಾಡಲಿದ್ದಾರೆ ಎಂದೇ ಊಹಿಸಲಾಗಿತ್ತು. ಆದರೆ, ಅವರು ಇದ್ಯಾವ ವಿಚಾರವನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿರಲಿಲ್ಲ.ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಸರಣಿ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಪಡಿಸಿರುವ ಸಿದ್ದರಾಮಯ್ಯ, "ಪ್ರಧಾನಿ ಮೋದಿ ಭಾಷಣಗಳು ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ. ನಿಯಂತ್ರಣ ಮೀರಿ ಹರಡುತ್ತಿರುವ ಕೊರೋನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು" ಎಂದು ಅಪಹಾಸ್ಯಕ್ಕೀಡು ಮಾಡಿದ್ದಾರೆ.

"ಕೊರೋನಾ ರೋಗಿಗಳಿಂದ ಆಸ್ಪತ್ರೆಗಳು ತುಂಬಿಹೋಗಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್‌ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೋನಾ ಸೋಂಕಿಗಿಂತ ಕೊರೋನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರಧಾನ್ಯ,ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಹೇಳಿಬಿಟ್ಟಿದ್ದರೆ, ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು. ಆದರೆ, ಆ ಕುರಿತು ಪ್ರಧಾನಿ ಮೋದಿ ತುಟಿ ಬಿಚ್ಚಿಲ್ಲ.

ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದು:ಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು.
ಇನ್ನೂ ಪಿಎಂ ಕೇರ್ಸ್‌ ನಿಧಿಗೆ ನೆರವಾಗಲು ದೇಶದ ಜನರನ್ನು ಮೋದಿ ವಿನಂತಿಸಿದ್ದರು. ಅದರ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು. ಆದರೆ, ಈ ಯಾವ ಪ್ರಶ್ನೆಗಳಿಗೂ ಅವರ ಭಾಷಣದಿಂದ ಉತ್ತರ ಸಿಕ್ಕಿಲ್ಲ" ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅನ್ನಭಾಗ್ಯ ಯೋಜನೆಯನ್ನು ಭಾರತದಾದ್ಯಂತ ಜಾರಿಗೊಳಿಸಿ


ಇದೇ ಸಂದರ್ಭದಲ್ಲಿ ಗರೀಬ್‌ ಕಲ್ಯಾಣ್‌ ಯೋಜನೆಯ ಮೂಲಕ ಬಡ ಜನರಿಗೆ ನವೆಂಬರ್‌ವರೆಗೆ ಉಚಿತ ಅಕ್ಕಿ ನೀಡಲು ಮುಂದಾಗಿರುವ ಮೋದಿ ನಡೆಯನ್ನು ಸ್ವಾಗತಿಸಿರುವ ಸಿದ್ದರಾಮಯ್ಯ, "ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು" ಎಂದಿದ್ದಾರೆ.
ಇದನ್ನೂ ಓದಿ :PM Modi Speech; ರೈತರ ಖಾತೆಗೆ ಹಣ, ನವೆಂಬರ್‌ ವರೆಗೆ ಆಹಾರ ಧಾನ್ಯ ಉಚಿತ ವಿತರಣೆ; ನರೇಂದ್ರ ಮೋದಿ


ಅಲ್ಲದೆ, "ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ‌ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ.


ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ‌‌ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕು" ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
First published: