ಬೆಂಗಳೂರು: ನಗರದಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದ (Bengaluru Rains) ಕೆ.ಆರ್.ವೃತ್ತದ ಅಂಡರ್ ಪಾಸ್ನಲ್ಲಿ ಮಳೆನೀರಿಗೆ ಸಿಲುಕಿ 22 ವರ್ಷದ ಯುವತಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (Former CM HD Kumaraswamy) ಪ್ರತಿಕ್ರಿಯೆ ನೀಡಿದ್ದು, ಬಿಬಿಎಂಪಿ (BBMP) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಎಚ್ಚರಿಕೆಯಿಂದ ವಾಹನ ಚಲಾಯಿಸಿ
ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು ಎಂದು ಹೇಳಿದ್ದಾರೆ.
ಅಂಡರ್ಪಾಸ್ ಪರಿಶೀಲಿಸಿ
ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Zero Traffic ಹಿಂಪಡೆದ ಸಿದ್ದರಾಮಯ್ಯ; ಹಾರ-ತುರಾಯಿಗೂ ನೋ ಎಂದ್ರು ಸಿಎಂ!
ಯಾರು ಈ ಭಾನುರೇಖಾ?
ಮೃತ ಭಾನುರೇಖಾ ಇನ್ಫೋಸಿಸ್ ಉದ್ಯೋಗಿ ಆಗಿದ್ದು, ವೀಕೆಂಡ್ ಹಿನ್ನೆಲೆ ಕುಟುಂಬಸ್ಥರ ಜೊತೆ ಸುತ್ತಾಡಲು ಹೋಗಿದ್ರು. ಏಕಾಏಕಿ ಬಂದ ಮಳೆಗೆ ಯುವತಿ ಸೇರಿ 6 ಮಂದಿ ಕುಟುಂಬಸ್ಥರು ಮಳೆಯಲ್ಲಿ ಅಂಡರ್ಪಾಸ್ನಲ್ಲಿ ಸಿಲುಕಿದ್ದರು. ತಕ್ಷಣ ಆರು ಮಂದಿಯನ್ನ ರಕ್ಷಿಸಲಾಗಿದ್ದು, ಯುವತಿ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆಗೆಂದು ಯುವತಿಯನ್ನ ಆಸ್ಪತ್ರೆಗೆ ಸೇರಿಸಲಾಯ್ತು. ಆದ್ರೆ ದುರಾದೃಷ್ಟವಶಾತ್ ಯುವತಿ ಸಾವನ್ನಪ್ಪಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ