ಬೆಂಗಳೂರು(ಅಕ್ಟೋಬರ್. 07): ಕಳೆದ ಹನ್ನೆರಡು ಏರೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. ಪ್ರಸಕ್ತ ಸಾಲಿನಲ್ಲಿ 2021 ರ ಫೆಬ್ರವರಿ 3 ರಿಂದ 7 ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು ಮೇಜಿನ ವರ್ಚುಯಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ಮಾತನಾಡಿದರು.
ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಇಂತಹ ಮಹತ್ವಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವುದು ಕರ್ನಾಟಕ ರಾಜ್ಯ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಒಂದು ಸವಾಲಿನ ವಿಷಯ. ಏರೋ ಇಂಡಿಯಾ 2021ರ ವೆಬ್‍ಸೈಟ್ ಪ್ರಾರಂಭವಾದ ಕೂಡಲೇ ವಸ್ತುಪ್ರದರ್ಶನಕ್ಕಾಗಿ ಈಗಾಗಲೇ ಆಸಕ್ತರು ಬಹುಪಾಲು ಸ್ಥಳವನ್ನು ಕಾಯ್ದಿರಿಸಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸರ್ಕಾರ ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಭಾಗವಹಿಸುವ ಅಂತರರಾಷ್ಟ್ರೀಯ ಗಣ್ಯರು, ಅಧಿಕಾರಿ/ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್, ಕಾಲಕಾಲಕ್ಕೆ ಸ್ಯಾನಿಟೈಸೇಷನ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವುದು ಮುಂತಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಹೇಳಿದರು.
ಭಾರತದ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮಕ್ಕೆ ಕರ್ನಾಟಕ ರಾಜ್ಯ ಶೇ. 25 ರಷ್ಟು ಕೊಡುಗೆ ನೀಡುತ್ತಿದೆ. ಭಾರತದ ವೈಮಾನಿಕ ಸಂಬಂಧಿತ ರಫ್ತಿಗೆ ಶೇ.65 ರಷ್ಟು ಹಾಗೂ ರಕ್ಷಣಾ ವಲಯದ ಸೇವೆಗಳಿಗಾಗಿ ಹೆಲಿಕಾಪ್ಟರ್ ಮತ್ತು ವಿಮಾನ ಉತ್ಪಾದನೆಗೆ ಶೇ.67 ಕೊಡುಗೆ ನೀಡುತ್ತಿದೆ ಎಂದರು.
ರಾಷ್ಟ್ರದಲ್ಲಿ ಏರೋಸ್ಪೇಸ್ ನೀತಿಯನ್ನು ರೂಪಿಸಿದ ಮೊಟ್ಟಮೊದಲ ರಾಜ್ಯ ಕರ್ನಾಟಕ. ಹೆಚ್‍ಎಎಲ್, ಬೆಮೆಲ್, ಬಿಇಎಲ್ ನಂತಹ ಪ್ರಮುಖ ಸಾರ್ವಜನಿಕ ವಲಯದ ಘಟಕಗಳು ಬೆಂಗಳೂರಿನಲ್ಲಿ ಸ್ಥಾಪಿತಗೊಂಡಿವೆ. ಬೆಳಗಾವಿಯಲ್ಲಿ ಖಾಸಗಿ ಏರೋಸ್ಪೇಸ್ ಆರ್ಥಿಕ ವಲಯ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 1000 ಎಕರೆ ಪ್ರದೇಶದಲ್ಲಿ ಏರೋಸ್ಪೇಸ್ ಪಾರ್ಕ್, ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ಮತ್ತು ತುಮಕೂರು ಜಿಲ್ಲೆಯಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ನ್ನು ಕರ್ನಾಟಕ ಒಳಗೊಂಡಿದೆ. ಪ್ರಾದೇಶಿಕ ನಾಗರಿಕ ವಿಮಾನಯಾನ ಸೌಲಭ್ಯಗಳು ಮತ್ತು ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ಸ್ಥಾಪನೆಗೆ ವಿಶೇಷ ಸಹಾಯಧನವನ್ನು ಹೂಡಿಕೆದಾರರಿಗೆ ಕರ್ನಾಟಕ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಮಾತನಾಡಿ, ಅತಿಥಿ ದೇವೋಭವ ಎಂಬ ಮಾತಿನಲ್ಲಿ ನಂಬಿಕೆ ಇರುವವರು ನಾವು. ಶಾಂತಿಗಾಗಿ ರಕ್ಷಣಾ ಇಲಾಖೆಯನ್ನು ಇನ್ನಷ್ಟು ಸಬಲಗೊಳಿಸಲು ಪೂರಕವಾಗಿ ರಕ್ಷಣಾ ನೀತಿಯನ್ನು ಅಳವಡಿಸಿಕೊಳ್ಳುವುದೇ ನಮ್ಮ ಉದ್ದೇಶ. ಭಾರತವು ಅತಿ ದೊಡ್ಡ ರಕ್ಷಣಾ ಉತ್ಪಾದನಾ ವಲಯವನ್ನು ಹೊಂದಿದೆ ಎಂದರು.
ಇದನ್ನೂ ಓದಿ : ದುಬಾರಿ ಮಾಸ್ಕ್ ದಂಡ: ವಿರೋಧ ಹಿನ್ನಲೆ 1000ರೂ ನಿಂದ 250ಕ್ಕೆ ಬೆಲೆ ಇಳಿಸಿದ ಕರ್ನಾಟಕ ಸರ್ಕಾರ
ಏರೋ ಇಂಡಿಯಾ 2021 ಮೂಲಕ ಭಾರತ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮದಲ್ಲಿ ಮುಂಚೂಣಿಯ ಐದು ರಾಷ್ಟ್ರಗಳಲ್ಲಿ ಒಂದಾಗಿರಬೇಕು ಎನ್ನುವುದು ನಮ್ಮ ಆಶಯ. ರಕ್ಷಣಾ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ