ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Assembly Election) ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ. ಈಗಾಗಲೇ ನನಗೆ 80 ವರ್ಷ ವಯಸ್ಸಾಗಿದೆ. ವಯಸ್ಸಿನ ಕಾರಣದಿಂದಲೇ ಮುಖ್ಯಮಂತ್ರಿ (Chief Minister) ಸ್ಥಾನಕ್ಕೂ ಈಗಾಗಲೇ ರಾಜೀನಾಮೆ ನೀಡಿದ್ದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನ ಮಾಡಿದ್ದೇನೆ ಎಂದು ಯಡಿಯೂರಪ್ಪ ಬೆಳಗಾವಿಯಲ್ಲಿ (Belagavi) ತಿಳಿಸಿದ್ದಾರೆ. ಆದರೆ ಪಕ್ಷದ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್‌ವೈ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈಗಾಗಲೇ ರಾಘವೇಂದ್ರ ಸಂಸದರಾಗಿದ್ದಾರೆ, ವಿಜಯೇಂದ್ರ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯದ್ಯಂತ ಪ್ರವಾಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ವಿಜಯೇಂದ್ರ ಇನ್ನೂ ಯುವಕರಿದ್ದು ಎಲ್ಲವನ್ನು ಸರಿದೂಗಿಸಿಕೊಂಡು ಹೋಗುತ್ತಾರೆ. ಆತನ ಜೊತೆಯಲ್ಲಿತೇ ನಾನು ಇರುತ್ತೇನೆ ಎಂದರು.
ರಾಜಕೀಯ ನಿವೃತ್ತಿಯಲ್ಲ
ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಅಷ್ಟೆ, ಆದರೆ ನಾನೇನು ರಾಜಕೀಯದಿಂದಲೇ ನಿವೃತ್ತಿಯಾಗುತ್ತಿಲ್ಲ. ಈ ಚುನಾವಣೆಯಲ್ಲಿ ಓಡಾಡುತ್ತೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆಯಲ್ಲೂ ಪಕ್ಷಕ್ಕಾಗಿ ದುಡಿದು ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: Amit Shah: ಬೆಳಗಾವಿಯಲ್ಲಿ ಬಿಜೆಪಿ ನಾಯಕರಿಗೆ ಅಮಿತ್ ಶಾ ಕ್ಲಾಸ್! ಗುಂಪುಗಾರಿಕೆ ಬಿಡಿ, ಕೆಲ್ಸ ಮಾಡಿ ಅಂತ ಖಡಕ್ ಸೂಚನೆ
140 ಸ್ಥಾನ ಗೆಲ್ಲುವ ವಿಶ್ವಾಸ
ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ನಮಗೆ ಮಾರ್ಗದರ್ಶನ ನೀಡಿ ಹೋಗಿದ್ದಾರೆ. 2023ರ ಚುನಾವಣೆಯಲ್ಲಿ ಖಂಡಿತ 140 ಸ್ಥಾನ ಪಡೆಯುತ್ತೇವೆ. ಆದರೆ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಕೆಲವರು ತಿರುಕನ ಕನಸು ಕಾಣುತ್ತಿದ್ದಾರೆ. ಅದು ನನಸಾಗಲ್ಲ ಎಂದು ಸಿದ್ದರಾಮಯ್ಯಗೆ ಪರೋಕ್ಷವಾಗಿ ಟಾಂಗ್ ನೀಡಿದ ಬಿಎಸ್‌ವೈ, ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ವಿಶ್ವಾಸ ಭವಿಷ್ಯ ನುಡಿದರು.
ಗೆಲ್ಲುವ ಅಭ್ಯರ್ಥಿಗೆ ಮಣೆ
ಬಿಜೆಪಿ ಟಿಕೆಟ್‌ಗಾಗಿ ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಪೈಪೋಟಿ ನಡೆಯುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ರಚನೆ ಮಾಡುವ ಪಕ್ಷ ಅಂದಮೇಲೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿರುತ್ತದೆ. ಈ ಬಗ್ಗೆ ನಾವೆಲ್ಲರೂ ಕುಳಿತು ಚರ್ಚೆ ಮಾಡಿ ನಂತರವೇ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಒಂದಲ್ಲ, ಎರಡು ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಾವು ಯಾವುದೇ ಹೊಂದಾಣಿಕೆ ಮಾಡುವುದಿಲ್ಲ ಎಂದು ತಿಳಿಸಿದರು.
ಒಂದೇ ತಾಯಿಯ ಮಕ್ಕಳಂತಿದ್ದೇವೆ
ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಶೀಥಲ ಸಮರದ ಬಗ್ಗೆ ಪ್ರತಿಕ್ರಿಯಿಸಿ, ಬೆಳಗಾವಿ ಜಿಲ್ಲೆಯ ಎಲ್ಲಾ ನಾಯಕರು ಒಂದೇ ತಾಯಿ ಮಕ್ಕಳಂತೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಎಲ್ಲರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಜಿಲ್ಲೆಯಲ್ಲಿ ಬಿಜೆಪಿ ಅಲೆ ಇದೆ. ಬೆಳಗಾವಿಯ 18 ಕ್ಷೇತ್ರ ಹಾಗೂ ರಾಜ್ಯದಲ್ಲಿ 140 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ