ಬೆಂಗಳೂರು (ಡಿ. 1): ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆದರೆ, ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಮುಂತಾದ ಆರೋಗ್ಯ ಸಮಸ್ಯೆಗಳ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ, ಮತ್ತೆ ಜೈಲು ಸೇರಿದ್ದಾರೆ. ಸಿಬಿಐ ವಿಶೇಷ ನ್ಯಾಯಾಲಯದಲ್ಲಿಂದು ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಪರಪ್ಪನ ಅಗ್ರಹಾರದಲ್ಲಿರುವ ರೋಷನ್ ಬೇಗ್ ಅವರನ್ನು ಇಂದು ಸಿಬಿಐ ಕಸ್ಟಡಿಗೆ ಪಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ಐಎಂಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ರೋಷನ್ ಬೇಗ್ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಅವರ ಆರೋಗ್ಯ ಸುಧಾರಿಸುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನ. 27ರಂದು ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗುವುದು ಬಹುತೇಕ ಅನುಮಾನವಾಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಗೂ, ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ; ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಪರಪ್ಪನ ಅಗ್ರಹಾರ ಜೈಲಲ್ಲಿರೋ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಕಸ್ಟಡಿಗೆ ಪಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ರೋಷನ್ ಬೇಗ್ ಅವರನ್ನು ಕಸ್ಟಡಿಗೆ ಕೊಡುವಂತೆ ನಿನ್ನೆ ಸಿಬಿಐ ಪರ ವಕೀಲರು ಕೋರ್ಟ್ಗೆ ಮನವಿ ಮಾಡಿದ್ದರು. ಈ ಹಿಂದೆ ವಿಚಾರಣೆಗಾಗಿ ರೋಷನ್ ಬೇಗ್ ಅವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ನೀಡಿದ ವೇಳೆ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಅವರ ವಿಚಾರಣೆ ಸಾಧ್ಯವಾಗಲಿಲ್ಲ. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಆರೋಗ್ಯದ ಪರಿಸ್ಥಿತಿ ಸುಧಾರಿಸಿದೆ. ಹೀಗಾಗಿ, ವಿಚಾರಣೆ ನಡೆಸಲು ಕಸ್ಟಡಿಗೆ ಕೊಡುವಂತೆ ಸಿಬಿಐ ಪರ ವಕೀಲರು ಮನವಿ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ