ಬೆಂಗಳೂರು: ಮಾಜಿ ಸಿಎಂ, ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ (Former CM Siddaramaiah) ಸದ್ಯ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯಲ್ಲಿ (Delhi) ಮಾಧ್ಯಮಗಳ ಜೊತೆ ಮಾತನಾಡಿರುವ ಸಿದ್ದರಾಮಯ್ಯ, ಹೊಸ ಚರ್ಚೆಗೆ ನಾಂದಿ ಹಾಕಿದ್ದಾರೆ. ಹಾಲಿ ಬಾದಾಮಿ (Badami Constituency) ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯನವರು ಈ ಬಾರಿ ಕೋಲಾರದಿಂದ (Kolar Constituency) ಸ್ಪರ್ಧೆ ಮಾಡುತ್ತಾರೆ ಎಂದು ಬಿಂಬಿತವಾಗಿದೆ. ಸ್ವತಃ ಸಿದ್ದರಾಮಯ್ಯನವರೇ ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಆದರೆ ದೆಹಲಿಯಲ್ಲಿಂದು ಸಿದ್ದರಾಮಯ್ಯ ಆಡಿದ ಮಾತುಗಳು ಅಚ್ಚರಿಗೆ ಕಾರಣವಾಗಿದೆ. ನಿನ್ನೆಯವರೆಗೂ ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡ್ತಾರೆ ಎನ್ನಲಾಗುತ್ತಿತ್ತು.
ಈಗಾಗಲೇ ಸುಮಾರು 125 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸಹ ಮಾಡಿದೆ ಎನ್ನಲಾಗಿದೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಬಳಿಕ ಕಾಂಗ್ರೆಸ್ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಆದರೆ ಸಿದ್ದರಾಮಯ್ಯ ಅವರಿಗೆ ತಾವು ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುವುದು ಗೊತ್ತಿಲ್ಲವಂತೆ. ಇಷ್ಟು ದಿನ ಕೋಲಾರ ಅಂತ ಹೇಳುತ್ತಿದ್ದ ಸಿದ್ದರಾಮಯ್ಯನವರು ಇಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದಾರೆ.
ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಸಿದ್ದರಾಮಯ್ಯ?
ಹೌದು, ಇಂದು ದೆಹಲಿಯಲ್ಲಿ ಮಾತನಾಡಿದ ಬಳಿಕ ಸಿದ್ದರಾಮಯ್ಯನವರು ಕೋಲಾರದಿಂದ ಹಿಂದೆ ಸರಿದ್ರಾ ಅನ್ನೋ ಅನುಮಾನ ಮೂಡಿದೆ. ನಾನು ಎಲ್ಲಿ ಸ್ಪರ್ಧೆ ಮಾಡಬೇಕು ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ.
ಬದಲಾವಣೆ ಹಿಂದಿದ್ಯಾ ರಾಹುಲ್ ಗಾಂಧಿ ಸಲಹೆ?
ದೆಹಲಿಯಲ್ಲಿ (Delhi) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ (Screening Committee) ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ಭಾಗಿಯಾಗಿದ್ದರು.
ಈ ಸಭೆ ಬಳಿಕ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು ಕೋಲಾರದಿಂದ ಸ್ಪರ್ಧೆ ಮಾಡದಂತೆ ಸಲಹೆ ನೀಡಿದ್ದಾರಂತೆ. ಈ ಹಿನ್ನೆಲೆ ಸಿದ್ದರಾಮಯ್ಯ ಕ್ಷೇತ್ರ ಬದಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಬಾದಾಮಿ ಕ್ಷೇತ್ರ ತೊರೆಯೋದಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸುರಕ್ಷಿತ ಕ್ಷೇತ್ರವಾಗಿ ಉಳಿದಿರೋದು ವರುಣಾ ಕ್ಷೇತ್ರ. ವರುಣಾದ ಶಾಸಕರಾಗಿರುವ ಯತೀಂದ್ರ ಸಿದ್ದರಾಮಯ್ಯ ತಂದೆಗಾಗಿ ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ವರುಣಾ ಶಾಸಕರಾಗಿದ್ದ ಸಿದ್ದರಾಮಯ್ಯ ಇಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಹಾಗಾಗಿ ವರುಣಾ ಕಾಂಗ್ರೆಸ್ ಭದ್ರಕೋಟೆ ಆಗಿದೆ.
2018ರ ತಂತ್ರ ಪುನರಾವರ್ತಿತ ಆಗುತ್ತಾ?
2018ರ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮತ್ತು ಬಾದಾಮಿಯಿಂದ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿಯಲ್ಲಿ ಸೋತಿದ್ದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡರ ವಿರುದ್ಧ ಸೋತಿದ್ದ ಸಿದ್ದರಾಮಯ್ಯ, ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಲ ಕೋಲಾರ ಮತ್ತು ವರುಣಾದಿಂದ ಸ್ಪರ್ಧೆ ಮಾಡುವ ಸಾಧ್ಯತೆಗಳನ್ನ ಅಲ್ಲಗಳೆಯುವಂತಿಲ್ಲ. ಒಂದು ವೇಳೆ ಎರಡೂ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ರೆ ವರುಣಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪುತ್ರ ಯತೀಂದ್ರಗೆ ಬಿಟ್ಟುಕೊಡುವ ಸಾಧ್ಯತೆಗಳಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ