ಹುಬ್ಬಳ್ಳಿ (ಫೆ. 25): ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ಮೂವರು ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಈ ಮೂವರು ವಿದ್ಯಾರ್ಥಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ
ಅಮೂಲ್ಯಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದರ ಮಾರನೇ ದಿನವೇ ಟೌನ್ ಹಾಲ್ ಎದುರು ಆರ್ದ್ರಾ ಎಂಬ ಯುವತಿ ಕೂಡ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿ, ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು. ಇದರ ಜೊತೆಗೆ
ಹುಬ್ಬಳ್ಳಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ವೈರಲ್ ಆಗಿತ್ತು. ಆ ವಿಡಿಯೋವನ್ನು ಆಧರಿಸಿ ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಗೆ ಗೌರಿ ಲಂಕೇಶ್ ರೀತಿ ಆಗುವ ಆಸೆ; ಪೊಲೀಸ್ ತನಿಖೆಯಲ್ಲಿ ಬಯಲು
ಆ ಮೂವರನ್ನು ಇದೀಗ ಹೆಚ್ಚಿನ ತನಿಖೆಗಾಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ಈ ಪ್ರಕರಣ ಫೆ. 15ರಂದು ಬೆಳಕಿಗೆ ಬಂದಿತ್ತು. ದೇಶದ್ರೋಹ ಪ್ರಕರಣವನ್ನು ದಾಖಲಿಸಿ ಮೂವರು ವಿದ್ಯಾರ್ಥಿಗಳನ್ನು ಜೈಲಿನಲ್ಲಿ ಇರಿಸಲಾಗಿತ್ತು. ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಾದ ಅಮೀರ್, ಬಾಸಿತ್ ಹಾಗೂ ತಾಲೀಬ್ನನ್ನು ಸೋಮವಾರ ಹುಬ್ಬಳ್ಳಿಯ ಎರಡನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಅವರ ಮೇಲೆ ದಾಳಿ ನಡೆದಿತ್ತು. ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ ಚಪ್ಪಲಿ ತೂರಿದ್ದರು.
ಇದನ್ನೂ ಓದಿ: ‘ಪಾಕ್ ಪರ ಘೋಷಣೆ‘ ಕೂಗಿದ ಆರೋಪ ಹೊತ್ತ ಮತ್ತೋರ್ವ ಯುವತಿ ಯಾರು? ಆಕೆ ಹಿನ್ನೆಲೆಯೇನು?
ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಫೆ. 28ರವರೆಗೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಸದ್ಯಕ್ಕೆ ಅಮೀರ್, ಬಾಸಿತ್ ಹಾಗೂ ತಾಲೀಬ್ ಹಿಂಡಲಗಾ ಜೈಲಿನಲ್ಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಈ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ