HOME » NEWS » State » KARNATAKA ASSEMBLY BYPOLLS RR NAGAR BY ELECTION BJP JDS CONGRESS CANDIDATES FILING NOMINATION TODAY SCT

ಆರ್​ಆರ್​ ನಗರ, ಶಿರಾ ಉಪಚುನಾವಣೆ; ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ

ಆರ್​ಆರ್​ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಹೆಚ್​.ಡಿ. ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ.

news18-kannada
Updated:October 14, 2020, 8:28 AM IST
ಆರ್​ಆರ್​ ನಗರ, ಶಿರಾ ಉಪಚುನಾವಣೆ; ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ
ಆರ್​ಆರ್​ ನಗರ ಉಪಚುನಾವಣೆ ಅಭ್ಯರ್ಥಿಗಳಾದ ಮುನಿತ್, ಕುಸುಮಾ, ಕೃಷ್ಣಮೂರ್ತಿ
  • Share this:
ಬೆಂಗಳೂರು (ಅ. 14): ಆರ್​ಆರ್​ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮೂರೂ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಈಗಾಗಲೇ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಆರ್​ಆರ್​ ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೊನೆಗೂ ಮುನಿರತ್ನ ಅವರಿಗೆ ಟಿಕೆಟ್ ನೀಡಲಾಗಿದೆ. ಇಂದು ಆರ್​ಆರ್​ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಹೆಚ್​.ಡಿ. ರೇವಣ್ಣ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಟಿ.ಬಿ. ಜಯಚಂದ್ರ ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಅ. 15ರಂದು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮುಂತಾದ ನಾಯಕರ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅ. 16 ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಕ್ಷೇತ್ರದ ಅಭ್ಯರ್ಥಿ ಅಮ್ಮಾಜಮ್ಮ ಅವರು ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪರವಾಗಿ ಹೆಚ್​.ಡಿ. ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೂಡ ನ. 3ರಂದು ಉಪಚುನಾವಣೆ ಘೋಷಿಸಲಾಗಿದೆ. ಆರ್​.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದ ಐಎಎಸ್​ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಶಿರಾ ಕ್ಷೇತ್ರದಿಂದ ಸತ್ಯನಾರಾಯಣ ಅವರ ಹೆಂಡತಿ ಅಮ್ಮಾಜಮ್ಮ ಅವರನ್ನು ಜೆಡಿಎಸ್​ ಕಣಕ್ಕಿಳಿಸಲಿದೆ. ಶಿರಾ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ ಸ್ಪರ್ಧಿಸಲಿದ್ದಾರೆ. ಆರ್​ಆರ್​ ನಗರ ಬಿಜೆಪಿ ಅಭ್ಯರ್ಥಿಯಾಗಿ ನಿನ್ನೆ ಸಂಜೆ ಮುನಿರತ್ನ ಅವರ ಹೆಸರನ್ನು ಘೋಷಿಸಲಾಗಿದೆ.

ಇದನ್ನೂ ಓದಿ: RR Nagar Bypolls: ಆರ್​ಆರ್​ ನಗರ ಉಪಚುನಾವಣೆಗೆ ಸುಪ್ರೀಂ ಕೋರ್ಟ್​ ಅನುಮತಿ; ಮುನಿರತ್ನಗೆ ಬಿಗ್ ರಿಲೀಫ್​

ಆರ್​ಆರ್​ ನಗರದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುನಿರತ್ನ ಗೆಲುವು ಸಾಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜು ಗೌಡ ಆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ, 2018ರ ಚುನಾವಣಾ ಅಕ್ರಮದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ನಡೆಯುತ್ತಿದ್ದುದರಿಂದ ಮುನಿರತ್ನ ಅವರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿರಲಿಲ್ಲ.
Youtube Video

ಆ ಅರ್ಜಿಯ ತೀರ್ಪನ್ನು ಮಂಗಳವಾರ ನೀಡಿದ್ದ ಸುಪ್ರೀಂ ಕೋರ್ಟ್​ ಉಪಚುನಾವಣೆ ನಡೆಸಲು ಅನುಮತಿ ನೀಡಿತ್ತು. ಈ ಮೂಲಕ ತುಳಸಿ ಮುನಿರಾಜು ಗೌಡ ಅವರಿಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿತ್ತು. ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್​ ಆರ್​ಆರ್​ ನಗರ ಉಪಚುನಾವಣೆಗೆ ಅನುಮತಿ ನೀಡಿತ್ತು. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಪ್ರಕಟವಾಗಲಿದೆ.
Published by: Sushma Chakre
First published: October 14, 2020, 8:27 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories