Karnataka Farmers Protest: ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿಂದು ರೈತರ ಪ್ರತಿಭಟನೆ

ರಾಜ್ಯ ಸರ್ಕಾರದ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಯ ಸುಗ್ರೀವಾಜ್ಞೆಗಳನ್ನ ವಿರೋಧಿಸಿ ಸಾವಿರಾರು ರೈತರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿರುವ ರೈತರು

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿರುವ ರೈತರು

  • Share this:
ಬೆಂಗಳೂರು(ಸೆ. 21): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಪ್ರಾರಂಭವಾಗುವ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್​ವರೆಗೂ ನಡೆಯಲಿದೆ. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಮುಂಜಾನೆಯೇ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.

ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿರುವ 3 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ರೈತರು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಾರ್ಮಿಕರು ಮತ್ತು ದಲಿತ ಸಂಘಟನೆಗಳೂ ಕೂಡ ಪ್ರತಿಭಟನೆಯಲ್ಲಿ ರೈತರಿಗೆ ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ರೈತರ ಪ್ರತಿಭಟನೆ ಹೆಚ್ಚು ತೀಕ್ಷ್ಣತೆ ಪಡೆದುಕೊಂಡಿದೆ.

ಇದನ್ನೂ ಓದಿ: ಅಧಿವೇಶನದಲ್ಲಿ ನಮ್ಮ ಸಂಕಷ್ಟ ಬಗ್ಗೆ ಚರ್ಚೆಯಾಗಲಿ: ನೇಕಾರ ಸಮುದಾಯ ಒತ್ತಾಯ

ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆಗಳನ್ನ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೆಯೇ, ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೂ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕೋವಿಡ್ ಸಂಕಷ್ಟ ಬಂದ ನಂತರ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ರೈತರ ಪ್ರತಿಭಟನೆ ಇದಾಗಿದೆ.
Published by:Vijayasarthy SN
First published: