ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegade Kageri) ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲರ ಪಕ್ಕದ ಆಸನದಲ್ಲಿ ಆಸೀನರಾಗಿದ್ದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ ಮೂಲಕ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು.
ಬಳಿಕ 15 ನೇ ವಿಧಾನಮಂಡಲ ಅಧಿವೇಶನದ ಹಿನ್ನೆಲೆ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಹೊಗಳಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ 5300 ಕೋಟಿ ಹಣ ನೀಡಿರುವ ಕೇಂದ್ರ ಸರ್ಕಾರದ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾಪಿಸಿದರು. ಜೊತೆಗೆ ಕೃಷ್ಣ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನಕ್ಕೆ ಕ್ರಮ ಸೇರಿದಂತೆ, ಬಯಲು ಸೀಮೆಯ ಜಿಲ್ಲೆಗಳ 527 ಕೆರೆಗಳಿಗೆ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೂಲಕ ನೀರು ತುಂಬಿಸುವ ಕ್ರಮವನ್ನೂ ಪ್ರಸ್ತಾಪ ಮಾಡಿದರು.
ಇದನ್ನೂ ಓದಿ: Assembly Session: ಇಂದಿನಿಂದ ವಿಧಾನ ಮಂಡಲ ಅಧಿವೇಶನ, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲರ ಭಾಷಣ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ ನಿಗಮದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಸಹ ಬೆಳಗಾವಿ ಜಿಲ್ಲೆಯಲ್ಲಿ ಪ್ರಾರಂಭ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ವಿಶೇಷ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಆಸ್ಪತ್ರೆಯನ್ನೂ ತೆರೆಯಲಾಗಿದೆ ಎಂದರು.
ರಾಜ್ಯ ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿದೆ
ಇನ್ನು ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದ ರಾಜ್ಯಪಾಲರು ಸರ್ಕಾರ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯನ್ನು ಅನುಕರಣೆ ಮಾಡುತ್ತಿದೆ. ರೈತರನ್ನು ಸಧೃಡಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿ ತಂದಿದೆ. ರೈತರು, ನೇಕಾರರು, ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ. 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ. ರೈತಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂ. ಡೀಸೆಲ್ ಸಹಾಯಧನ ನೀಡಲಾಗಿದೆ. 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಲೋಕಾರ್ಪಣೆ ಮಾಡಲಾಗಿದೆ. ಕೃಷಿ ಸಂಜೀವಿನಿ ಯೋಜನೆಯಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Republic Day: ಗಣರಾಜ್ಯೋತ್ಸವದ ಭಾಷಣದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಕೊಂಡಾಡಿದ ರಾಜ್ಯಪಾಲರು
ಹೂಡಿಕೆದಾರರಿಗೆ ಆಹ್ವಾನ
ಇನ್ನು 2021-22ರಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರಿಗೆ ರಾಜ್ಯಕ್ಕೆ ಆಹ್ವಾನ ಮಾಡಲಾಗಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ರೋಜ್ಗಾರ್ ನೀತಿ ತಂದಿದೆ. ರಾಜ್ಯದಲ್ಲಿ ವಿಮಾನಯಾನ ಅಭಿವೃದ್ಧಿಗೆ ಕೂಡ ಸರ್ಕಾರ ಒತ್ತು ನೀಡಿದ್ದು, ಸದ್ಯದಲ್ಲೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಆಗಲಿದೆ. ವಿಜಯಪುರ, ಹಾಸನ ಏರ್ಪೋರ್ಟ್ ನಿರ್ಮಾಣ ಕಾರ್ಯ ಮುಗಿದಿದ್ದು, ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರೈತರು, ಕಾರ್ಮಿಕರು, ಬಡವರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಿದೆ ಎಂದು ತಿಳಿಸಿದರು.
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಕ್ಕೆ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥದಲ್ಲಿ ಕರ್ನಾಟಕ ಯಶಸ್ವಿಯಾಗಿ ಮುಂದುವರಿಯುವ ವಿಶ್ವಾಸ ಇದೆ. 150 ಕೋಟಿ ರೂ. ವೆಚ್ಚದಲ್ಲಿ 1 ಲಕ್ಷದ 614 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ನೀಡಲಾಗುತ್ತಿದೆ. ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ಹೊಸ ಯೋಜನೆಯಡಿ ಒಂದು ಸಾವಿರ ಬಹುಮಹಡಿ ವಿದ್ಯಾರ್ಥಿ ನಿಲಯ ಸಮುಚ್ಚಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಅನುದಾನದಲ್ಲಿ ಸುಮಾರು 268.98 ಕೋಟಿ ರೂ. ವೆಚ್ಚದಲ್ಲಿ 4244 ಹೊಸ ಅಂಗನವಾಡಿ ಕೇಂದ್ರಗಳನ್ನ ತೆರೆಯಲು ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ