SSLC ಪಠ್ಯಪುಸ್ತಕದಲ್ಲಿ ನಾರಾಯಣ ಗುರು (Narayana Guru) ಅವರ ಕುರಿತು ವಿಷಯವನ್ನು ಕೈಬಿಟ್ಟಿಲ್ಲ. ನಾರಾಯಣ ಗುರುಗಳ ವಿಷಯವನ್ನು ಪಠ್ಯಪುಸ್ತಕದಿಂದ (Karnataka School Textbook) ಕೈಬಿಟ್ಟಿದ್ದೇವೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ನಾರಾಯಣ ಗುರುಗಳ ಕುರಿತು ಪಠ್ಯಪುಸ್ತಕದಿಂದ ತೆಗೆಯಲಾಗಿದೆ ಎಂಬ ಸುದ್ದಿಯನ್ನು ನಂಬಬಾರದು. ವಿರೋಧ ಪಕ್ಷಗಳೂ ಜಾಗೃತಿಯಿಂದ ವರ್ತಿಸಿ ಇಂತಹ ಸುದ್ದಿಗಳಿಗೆ ಪುಷ್ಠಿ ನೀಡಬಾರದು ಎಂದು ಸಚಿವ ಕೋಟ ಶ್ರೀನಿವಾಸ (Minister Kota Srinivas Poojary) ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಈಮೂಲಕ ಅವರು ಸದ್ಯ ವಿವಾದದ ಕೇಂದ್ರಬಿಂದು ಆಗಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.
ಪಠ್ಯಪುಸ್ತಕಗಳು ಇನ್ನೂ ಮುದ್ರಣ ಹಂತದಲ್ಲಿದ್ದು, ಇನ್ನೂ ವಿದ್ಯಾರ್ಥಿಗಳಿಗೆ ತಲುಪಿಲ್ಲ. 65 ವರ್ಷಗಳ ಕಾಲ ಆಡಳಿತ ನಡೆಸಿದ ಪಕ್ಷವಾದ ಕಾಂಗ್ರೆಸ್ ಪರಿಷ್ಕೃತ ಪಠ್ಯಪುಸ್ತಕದ ಕುರಿತು ಇಂತಹ ಸುಳ್ಳು ಆರೋಪಗಳನ್ನು ಮಾಡಬಾರದು, ಅವರು ಆರೋಪ ಮಾಡುವ ಅಧ್ಯಾಯಗಳನ್ನು ಓದಲೇ ಇಲ್ಲ. ಏಕೆಂದರೆ ಪಠ್ಯಪುಸ್ತಕವನ್ನು ಇನ್ನೂ ಮುದ್ರಿಸಲಾಗುತ್ತಿದೆ ವಿದ್ಯಾರ್ಥಿಗಳ ಕೈಗೆ ಸೇರಿಯೇ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆ ಹಿಡಿಯಿಡಿ: ಸಿದ್ದರಾಮಯ್ಯ ಆಗ್ರಹ
ಪಠ್ಯ ಪುಸ್ತಕ (Text Book) ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆ ಹಿಡಿದು ರಾಜ್ಯದ ಶಿಕ್ಷಣ ತಜ್ಞರು, (Eduction Experts) ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತಕ್ಷಣ ಸಮಿತಿ ಬರ್ಖಾಸ್ತುಗೊಳಿಸಿ
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸು ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡವಿದ ಬಿಜೆಪಿ ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ.
ಕರ್ನಾಟಕ ತಲೆ ತಗ್ಗಿಸುವಂತಾಗಿದೆ
ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವದ್ರೋಹ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಖುದ್ದಾಗಿ ಸ್ಪಷ್ಟೀಕರಣನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Supreme Court: 8 ವಾರದೊಳಗೆ BBMP ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ಸುಪ್ರೀಂ ಸೂಚನೆ
ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ
ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆ ಮೊದಲಾದವರನ್ನು ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ, ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ, ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂದು ಮಾಧ್ಯಮ ಪ್ರಕಟಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ