ನವದೆಹಲಿ(ಜುಲೈ.29): ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಳಿಕ ತಮ್ಮ ಸ್ಥಾನ ಉಳಿಸಿಕೊಳ್ಳಲು ದೆಹಲಿ ನಾಯಕರ ಮೊರೆ ಹೋದ ಸರದಿ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರದು. ಮುಂದಿನ ತಿಂಗಳು ರಾಜ್ಯ ಸಚಿವ ಸಂಪುಟ ಸರ್ಜರಿ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸುಳಿವು ನೀಡಿರುವುದರಿಂದ ಕೆಲವರಿಗೆ ಅಭದ್ರತೆ ಕಾಡುತ್ತಿದೆ.
ಆ ಪಟ್ಟಿಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಕೂಡ ಇದ್ದಾರೆ. ಆದುದರಿಂದಲೇ ಇಬ್ಬರೂ ನಾಯಕರು ದೆಹಲಿಗೆ ಆಗಮಿಸಿ ಹೈಕಮಾಂಡ್ ನಾಯಕರ ಮೂಲಕ ಒತ್ತಡ ಹೇರಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮನ್ನು ಸಚಿವ ಸಂಪುಟದಿಂದ ಕೈ ಬಿಡುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ, ನನಗೆ ಆ ರೀತಿಯ ಯಾವುದೇ ಮಾಹಿತಿ ಇಲ್ಲ. ಈ ವಿಷಯ ಅಲ್ಲಿ ಚರ್ಚೆ ಆಗುತ್ತಿರುವುದು ಹಾಗೂ ನಾನು ದೆಹಲಿಗೆ ಬಂದಿದ್ದು ಕಾಗೆ ಕೂರುವ ವೇಳೆ ರೆಂಬೆ ಮುರಿದಂತದಂತಾಗಿದೆ ಎಂದು ಹೇಳಿದರು.
ನಮ್ಮ ಇಲಾಖೆಯ ಕೆಲಸಗಳ ಮೇಲೆ ದೆಹಲಿಗೆ ಬಂದಿದ್ದೇನೆ. ಆದರೆ ಇದು ಸಚಿವ ಸ್ಥಾನ ಉಳಿಸಿಕೊಳ್ಳಲು ದೆಹಲಿ ಭೇಟಿ ಎನ್ನುವಂತಾಗಿದೆ. ಆ ರೀತಿಯ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಕರ್ನಾಟಕ ಭವನದಲ್ಲೇ ಇದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿದ್ದೇನೆ. ಅವಕಾಶ ಸಿಕ್ಕಿದರೆ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವೆ. ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೈಕಮಾಂಡ್ ನಾಯಕತಿಗೆ ಧನ್ಯವಾದ ಹೇಳಲಿದ್ದೇನೆ ಎಂದರು.
ಇದಲ್ಲದೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡಲ್ಲಿ ಒಂದು ಆಗಲಿದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ನಾನು ಬದ್ಧ ಎಂದು ಹೇಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Published by:G Hareeshkumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ