news18-kannada Updated:October 26, 2020, 9:47 AM IST
ಮಳೆಯಿಂದ ಜಲಾವೃತವಾದ ಬೆಂಗಳೂರು
ಬೆಂಗಳೂರು (ಅ. 26): ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆಯ ಸಿಂಚನವಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ನಾಳೆಯವರೆಗೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಹಲವೆಡೆ ಮಳೆಯಾಗುತ್ತಿರುವುದರಿಂದ ಅದರ ಪರಿಣಾವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆ ಹೆಚ್ಚಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಇಂದು ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 27, 28ರಂದು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಹಾವೇರಿ ಗದಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ನವರಾತ್ರಿ ಉತ್ಸವಕ್ಕೆ ಇಂದು ತೆರೆ; ಮೈಸೂರು ದಸರಾ ಜಂಬೂಸವಾರಿಗೆ ಸಿದ್ಧವಾದ ಗಜಪಡೆ
ನಿನ್ನೆ ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರಂ, ಶ್ರೀರಾಮಪುರ, ಯಶವಂತಪುರ, ವಿಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿತ್ತು. ಕರ್ನಾಟಕ ಬಹುತೇಕ ಎಲ್ಲ ಕಡೆ ಇಂದು ಮತ್ತು ನಾಳೆ ಮಳೆಯಾಗುವ ನಿರೀಕ್ಷೆ ಇದ್ದು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಈಗ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತಗ್ಗಿದ್ದು, ದಕ್ಷಿಣ ಒಳನಾಡಿನಲ್ಲಿ ಅ. 27ರವರೆಗೆ ಮಳೆ ಮುಂದುವರಿಯಲಿದೆ.
ಕೇರಳದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅ. 27ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರದವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
Published by:
Sushma Chakre
First published:
October 26, 2020, 9:04 AM IST