• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ; ಗಂಜಿ ಕೇಂದ್ರ ತೆರೆಯಲು ಎಸ್​.ಆರ್​. ಪಾಟೀಲ್ ಆಗ್ರಹ

ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ; ಗಂಜಿ ಕೇಂದ್ರ ತೆರೆಯಲು ಎಸ್​.ಆರ್​. ಪಾಟೀಲ್ ಆಗ್ರಹ

ಎಸ್​ಆರ್​ ಪಾಟೀಲ್

ಎಸ್​ಆರ್​ ಪಾಟೀಲ್

North Karnataka Rain: ಉತ್ತರ ಕರ್ನಾಟಕದ ಪ್ರವಾಹಪೀಡಿತ ಸ್ಥಳಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಗಂಜಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್​.ಆರ್​. ಪಾಟೀಲ್ ಒತ್ತಾಯಿಸಿದ್ದಾರೆ.

  • Share this:

ಬೆಂಗಳೂರು (ಅ. 14): ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹೀಗಾಗಿ, 7 ಜಿಲ್ಲೆಗಳಲ್ಲಿ ಇಂದು ಜಿಲ್ಲಾಡಳಿತಗಳಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಿಂದ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಮೂರ್ನಾಲ್ಕು ತಿಂಗಳಿಂದ ಕಡಿಮೆಯಾಗಿದ್ದ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಉತ್ತರ ಕರ್ನಾಟಕದ ಪ್ರವಾಹಪೀಡಿತ ಸ್ಥಳಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್​.ಆರ್​. ಪಾಟೀಲ್ ಒತ್ತಾಯಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮೂಲಕ ಸರ್ಕಾರವನ್ನು ಮನವಿ ಮಾಡಿರುವ ಕಾಂಗ್ರೆಸ್ ನಾಯಕ ಎಸ್​.ಆರ್​. ಪಾಟೀಲ್, ಉತ್ತರ ಕರ್ನಾಟಕದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ವಿಪತ್ತು ನಿರ್ವಹಣಾ ಪಡೆಗಳಿಗೆ ಸರ್ಕಾರ ಸೂಚಿಸಿದ್ದು, ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ತುರ್ತಾಗಿ ಸ್ಥಳಾಂತರಿಸುವ ಕೆಲಸವನ್ನು ಮಾಡುತ್ತಿಲ್ಲ ಎಂದಿದ್ದಾರೆ.



ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ರೆಡ್ ಅಲರ್ಟ್​ ಘೋಷಣೆ; ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ


ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಕೂಡಲೇ ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನ ತೆರೆದು ಆಹಾರ, ಔಷಧ ಮತ್ತು ಅಗತ್ಯ ಸಾಮಗ್ರಿಗಳನ್ನು ತಲುಪಿಸುವ ಕೆಲಸವನ್ನು ಮಾಡಬೇಕಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿ ಆಗ್ರಹಿಸುತ್ತಿದ್ದೇನೆ ಎಂದು ಸರ್ಕಾರವನ್ನು ಎಸ್​.ಆರ್​. ಪಾಟೀಲ್ ಒತ್ತಾಯಿಸಿದ್ದಾರೆ.



ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರಿನ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಪ್ರವಾಹ ಪೀಡಿತ ಪ್ರದೇಶಗಳ ಜನ ಎಚ್ಚರಿಕೆಯಿಂದ ಇರಬೇಕು ಎಂದು ಎಸ್​.ಆರ್​. ಪಾಟೀಲ್ ಟ್ವಿಟ್ಟರ್​ನಲ್ಲಿ ಉತ್ತರ ಕರ್ನಾಟಕದ ಜನರಿಗೆ ಮನವಿ ಮಾಡಿದ್ದಾರೆ.




ಇಂದು ಮತ್ತು ನಾಳೆ ಕೂಡ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರದಲ್ಲಿ ಇಂದು 204 ಮಿ.ಮೀ.ವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ. ಅಲ್ಲದೆ, ವಿಜಯಪುರ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಗದಗ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

First published: