ಮಳೆಗೆ ತತ್ತರಿಸಿರುವ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ; ಹೆಚ್​ಡಿ ಕುಮಾರಸ್ವಾಮಿ ಒತ್ತಾಯ

HD Kumaraswamy: ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ

  • Share this:
ಬೆಂಗಳೂರು (ಅ. 15): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ನಷ್ಟಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿಯೂ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ರೆಡ್ ಅಲರ್ಟ್​ ಘೋಷಿಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಟ್ವೀಟ್​ ಮೂಲಕ ಒತ್ತಾಯಿಸಿರುವ ಹೆಚ್​ಡಿ ಕುಮಾರಸ್ವಾಮಿ, ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.



ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.



ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ; ರಾಜ್ಯದ ಹಲವೆಡೆ ಇಂದು ಆರೆಂಜ್ ಅಲರ್ಟ್​

ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಅಭಿಪ್ರಾಯಟ್ಟಿದ್ದಾರೆ.



ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಇಂದು ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ. ಹೈದರಾಬಾದ್​ ಕರ್ನಾಟಕದಲ್ಲಿ ಕೂಡ ಮಳೆಯ ಅಬ್ಬರ ಹೆಚ್ಚಾಗಲಿದೆ. ವಿಜಯಪುರದಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಜಯಪುರ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ಸುತ್ತಮುತ್ತ, ಬೆಳ್ತಂಗಡಿ, ಸುಳ್ಯ, ಪುತ್ತೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ ಕೊನೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಯಿಂದ ನಿನ್ನೆ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿಯಲ್ಲಿ ನಿನ್ನೆ ಸುರಿದ ಮಳೆಗೆ ಓರ್ವ ವ್ಯಕ್ತಿ ಭೀಮಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಮನೆಯ ಗೋಡೆ ಕುಸಿದು ರೋಣ ತಾಲೂಕಿನ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ವಿಜಯಪುರದಲ್ಲೂ ವಿಪರೀತ ಮಳೆಯಾಗಿದ್ದು, ರಸ್ತೆಗಳು, ಮನೆಗಳು ಜಲಾವೃತವಾಗಿವೆ.
Published by:Sushma Chakre
First published: