ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​; ರಾಜ್ಯದ ಮಳೆಗೆ 13 ಬಲಿ

Karnataka Rain Updates: ಕರ್ನಾಟಕದಲ್ಲಿ ಭಾರೀ ಮಳೆ ಹಿನ್ನೆಲೆ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. 28 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,140 ಮನೆಗಳು ಬಹುತೇಕ ಹಾನಿಗೊಳಗಾಗಿವೆ. ಇದುವರೆಗೂ 13 ಜನರು ಸಾವನ್ನಪ್ಪಿದ್ದಾರೆ.

Sushma Chakre | news18-kannada
Updated:August 10, 2020, 10:40 AM IST
ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​; ರಾಜ್ಯದ ಮಳೆಗೆ 13 ಬಲಿ
ಚಿಕ್ಕಮಗಳೂರಿನಲ್ಲಿ ಮಳೆಯ ಅವಾಂತರ
  • Share this:
ಬೆಂಗಳೂರು (ಆ. 10): ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದಾಗಿ ಈ ಜಿಲ್ಲೆಗಳಲ್ಲಿ ಆ. 13ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಿಸಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಇದುವರೆಗೂ 13 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಕಾರವಾರ ಸಮುದ್ರದಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದ್ದು, ಅಕ್ಕಪಕ್ಕದ ಗ್ರಾಮಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದ ಕೆ.ಆರ್​.ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್​ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ.

ಇದನ್ನೂ ಓದಿ: Kerala Rains: ವಿಪರೀತ ಮಳೆಯಿಂದ ಕೇರಳದ 6 ಜಿಲ್ಲೆಗಳಲ್ಲಿಂದು ಹೈ ಅಲರ್ಟ್​; ಇಡುಕ್ಕಿ ಭೂಕುಸಿತದ ಸಾವಿನ ಸಂಖ್ಯೆ 43ಕ್ಕೆ ಏರಿಕೆ

ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್​ಎಸ್​, ಹಾರಂಗಿ, ಹೇಮಾವತಿ, ಕಬಿನಿ ಡ್ಯಾಂಗಳು ಬಹುತೇಕ ಭರ್ತಿಯಾಗಿವೆ. ಕಾವೇರಿ ನದಿ ಅಥವಾ ಹಿನ್ನೀರಿನ ಬಳಿ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರಿನಲ್ಲಿ ಚಾರ್ಮಾಡಿ ಘಾಟ್​ ಬಂದ್ ಆಗಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ತುಂಗಾ, ಭದ್ರಾ ನದಿಗಳು ಉಕ್ಕಿ ಹರಿಯುತ್ತಿವೆ.
ಕರ್ನಾಟಕದಲ್ಲಿ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. 28 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,140 ಮನೆಗಳು ಬಹುತೇಕ ಹಾನಿಗೊಳಗಾಗಿವೆ. ರಾಜ್ಯದ 31,541 ಹೆಕ್ಟೇರ್ ಬೆಳೆ ಮತ್ತು 35,000 ತೋಟಗಾರಕಾ ಬೆಳೆಗಳು ಮಳೆಯಿಂದ ನಾಶವಾಗಿದೆ.
Published by: Sushma Chakre
First published: August 10, 2020, 10:40 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading