Karnataka Weather Updates: ಬೆಂಗಳೂರು(ಜು.25): ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರವಾಗಿದ್ದು, ಕಳೆದ ಹತ್ತು ದಿನಗಳಿಂದ ರಾಜ್ಯದ ಹಲವೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಮನೆಗಳು ಕುಸಿದಿವೆ. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿವೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ (ಜು.25 ಮತ್ತು 26)ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆರಾಯ ಕೊಂಚ ವಿರಾಮ ಕೊಡಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವಾದಾಗಿನಿಂದ 501.6 ಮಿ.ಮೀ ಮಳೆ ಸುರಿದಿದೆ. ಪ್ರತೀ ವರ್ಷ ಸಾಮಾನ್ಯವಾಗಿ 403.8 ಮಿ.ಮೀ ಮಳೆಯಾಗುತ್ತಿತ್ತು. ಈ ಬಾರಿ ಹೆಚ್ಚುವರಿ ಶೇ.24ರಷ್ಟು ಮಳೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ ರಾತ್ರಿ 8.30ರವರೆಗೆ 24.4 ಮಿ.ಮೀ. ಮಳೆ ದಾಖಲಾಗಿದೆ. ಹೆಚ್ಎಎಲ್ ಏರ್ಪೋರ್ಟ್ ಒಂದರಲ್ಲೇ 16.6 ಮಿ.ಮೀ ಮಳೆ ಸುರಿದಿದೆ.
ಇದನ್ನೂ ಓದಿ:Astrology: ಈ ರಾಶಿಯವರಿಗೆ ಇಂದು ಹಳೆಯ ಬಾಕಿ ಹಣ ಕೈ ಸೇರಲಿದೆ: 12 ರಾಶಿಗಳ ದಿನಭವಿಷ್ಯ ಹೀಗಿದೆ
ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟಕ್ಕೆ 9 ಮಂದಿ ಬಲಿಯಾಗಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಕಳೆದ 3 ದಿನಗಳಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಒಟ್ಟು 8 ಕಡೆ ಭೂ ಕುಸಿತ ಸಂಭವಿಸಿದೆ. ಸುಮಾರು 9 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಹ ಪಡೀತ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಸರಣಿ ಸಭೆಗಳು ಹಾಗೂ ವಿಡಿಯೋ ಕಾನ್ಫೆರೆನ್ಸ್ಗಳನ್ನು ನಡೆಸುತ್ತಿದ್ದಾರೆ. ಮುಖ್ಯವಾಗಿ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಮತ್ತು ಧಾರಾವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಇಂದು ಸಿಎಂ ಯಡಿಯೂರಪ್ಪ ಅತೀ ಹೆಚ್ಚು ಮಳೆಯ ಹೊಡೆತಕ್ಕೆ ಸಿಲುಕಿರುವ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಇದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿಕೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.
ಈ ವರ್ಷ ಮಳೆಗೆ ಬಲಿಯಾದ 9 ಮಂದಿಯಲ್ಲಿ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟು ನಾಲ್ಕು ಜನ, ಧಾರಾವಾಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಟ್ಟು ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಲ್ಲಿ ಮನೆ ಕುಸಿದು ಒಬ್ಬ ವ್ಯಕ್ತಿ ಮೃತಪಟ್ಟರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ಕೃಷ್ಣಾ, ಕಾವೇರಿ, ತುಂಗಭದ್ರಾ, ಭೀಮಾ, ಕಪಿಲಾ(ಕಬಿನಿ) ಹಾಗೂ ಇನ್ನೂ ಮೊದಲಾದ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ಸುಮಾರು 131 ಗ್ರಾಮಗಳು, 18 ತಾಲೂಕುಗಳು, 16,213 ಜನರು ಪ್ರವಾಹ ಭೀತಿಯನ್ನು ಎದುರಿಸುತ್ತಿದ್ದಾರೆ.
ಇದನ್ನೂ ಓದಿ:Flood Alert - ತುಂಗಭದ್ರಾ ಪ್ರವಾಹ ಭೀತಿ; ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಆಡಳಿತ ಸೂಚನೆ
ಭಾರೀ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿವೆ. 21 ಮನೆಗಳು ಮಳೆಗೆ ಕುಸಿದಿದ್ದರೆ, 804 ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿವೆ. ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಬೈಲ್ ಘಾಟ್ ಸೇರಿದಂತೆ ಒಟ್ಟು 16 ಕಡೆ ಭೂಕುಸಿತ ಸಂಭವಿಸಿದೆ. ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳೀಯ ಅಧಿಕಾರಿಗಳ ಜೊತೆ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ 7 ದಿನಗಳಲ್ಲಿ 500 ಮಿ.ಮೀ. ಮತ್ತು 1,238 ಮಿ.ಮೀ ಮಳೆಯಾಗಿದೆ. 40 ಸಾವಿರ ಜನರು ಮಳೆಯ ಹೊಡೆತಕ್ಕೆ ಸಿಕ್ಕಿ ನಲುಗಿದ್ದಾರೆ. 283 ಹಳ್ಳಿಗಳು, 45 ತಾಲೂಕುಗಳು ವರುಣನ ಅಬ್ಬರಕ್ಕೆ ಸಿಲುಕಿವೆ. ರಸ್ತೆಗಳು, ಕೃಷಿ ಭೂಮಿ, ವಿದ್ಯುತ್ ಕಂಬಗಳು, ಸೇತುವೆಗಳು, ಶಾಲಾ ಕಟ್ಟಡಗಳು ಹಾಗೂ ಇನ್ನಿತರೆ ಸಾರ್ವಜನಿಕ ಆಸ್ತಿಗಳು ಮಳೆಯಿಂದಾಗಿ ಹಾನಿಯಾಗಿವೆ.
ಇನ್ನು, 65 ಸೇತುವೆಗಳು, 10 ಶಾಲೆಗಳು ಹಾಗೂ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮಳೆಯ ಹೊಡೆತಕ್ಕೆ ಸಿಕ್ಕಿ ಹಾನಿಯಾಗಿವೆ. ಸುಮಾರು 291.03 ಕಿ.ಮೀ ಉದ್ದದ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ. ರಾಜ್ಯದಲ್ಲಿ ಸುಮಾರು 80 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಅಲ್ಲಿ 4,964 ಮಂದಿ ವಾಸಿಸುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ