news18-kannada Updated:September 14, 2020, 1:13 PM IST
ಮಳೆಯ ಸಾಂದರ್ಭಿಕ ಚಿತ್ರ
ಬೆಂಗಳೂರು (ಸೆ. 14): ಕರ್ನಾಟಕದ ಬಹುತೇಕ ಭಾಗಗಳಲ್ಲಿ ಐದಾರು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ದಕ್ಷಿಣ ಕನ್ನಡದ ಹಲವೆಡೆ ಒಂದೇ ಸಮನೆ ಮಳೆಯಾಗುತ್ತಿದೆ. ಇಂದಿನಿಂದ ಸೆಪ್ಟೆಂಬರ್ 17ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17 ರವರೆಗೆ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.
ಇದನ್ನೂ ಓದಿ: Sandalwood Drug Case: ಸ್ಯಾಂಡಲ್ವುಡ್ ಡ್ರಗ್ ಕೇಸ್; ನಟಿ ರಾಗಿಣಿ ಸೇರಿ ಎಲ್ಲ ಆರೋಪಿಗಳ ಜಾಮೀನು ಅರ್ಜಿ ಮುಂದೂಡಿಕೆ
ಉತ್ತರ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ಸೆಪ್ಟೆಂಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸೂಚಿಸಲಾಗಿದೆ.
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಮುಂಬೈ ಕರ್ನಾಟಕದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಕೊಡಗಿನಲ್ಲಿ 2 ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
Published by:
Sushma Chakre
First published:
September 14, 2020, 1:13 PM IST