ಬೆಂಗಳೂರು (ಡಿ. 10): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಮುಸುಕಿದ ವಾತಾವರಣವಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 3 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 12ರವರೆಗೂ ಮಳೆ ಸುರಿಯಲಿದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 3 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Gold Rate: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಬೆಲೆಯೆಷ್ಟು?
ನಿನ್ನೆ ಶಿವಮೊಗ್ಗ, ಭದ್ರಾವತಿ, ಲಕ್ಕವಳ್ಳಿ, ಚಿಕ್ಕಮಗಳೂರಿನ ಕಳಸ, ಕೊಪ್ಪ, ಲಕ್ಕವಳ್ಳಿ, ಮಂಗಳೂರು, ವಿಟ್ಲ, ಪಣಂಬೂರು ಮುಂತಾದ ಕಡೆಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇಂದು ಕೂಡ ಕರಾವಳಿ, ಮಲೆನಾಡು, ಕೊಡಗು, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ 24 ಹಾಗೂ ಕನಿಷ್ಟ 19 ಡಿಗ್ರಿ ಸೆಲ್ಷಿಯಸ್ ತಾಪಮಾನ ಇರಲಿದ್ದು, ಚಳಿ ಹೆಚ್ಚಾಗಲಿದೆ. ಜೊತೆಗೆ ತುಂತುರು ಮಳೆಯೂ ಸುರಿಯು ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು. ಅದರಂತೆ ಇಂದು ಸಂಜೆಯ ಬಳಿಕ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಡಿ. 12ರವರೆಗೆ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ ಭಾಗದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ 2 ದಿನ ಸಿಕ್ಕಿಂ, ಮಹಾರಾಷ್ಟ್ರದ ಕರಾವಳಿ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಕರ್ನಾಟಕದ ಕರಾವಳಿ ತೀರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ