ಬೆಂಗಳೂರು (ಸೆ. 23): ನಾಲ್ಕೈದು ದಿನಗಳಿಂದ ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ನಿನ್ನೆಯಿಂದ ಹಲವೆಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಿದ್ದ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಇನ್ನೂ 2 ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹೀಗಾಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಮಂಗಳೂರು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನಿನ್ನೆ ಸಂಜೆಯಿಂದ ಚಿಕ್ಕಮಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಇಂದು ಮತ್ತು ನಾಳೆ ಕರಾವಳಿ, ಶಿವಮೊಗ್ಗ, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಸಮುದ್ರದಲ್ಲಿ ಅಲೆಗಳು ಅಪ್ಪಳಿಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ರೌಡಿಶೀಟರ್ನನ್ನು ಬಂಧಿಸಿದ ಪೊಲೀಸ್ ಠಾಣೆಗೆ ನುಗ್ಗಿ ಬೆದರಿಕೆಯೊಡ್ಡಿದ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ
ಸೆ. 24ರ ನಂತರ ಕರ್ನಾಟಕದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗರಿಷ್ಠ 14 ಸೆಂ.ಮೀ. ಮಳೆಯಾಗಿದೆ. ಕೊಡಗಿನ ಭಾಗಮಂಡಲದಲ್ಲಿ 12 ಸೆಂ.ಮೀ. ಮಳೆಯಾಗಿದೆ. ಇಂದು ಉಡುಪಿ, ಕೊಡಗು, ಭಟ್ಕಳದಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾ ಜಲಾಶಯದಿಂದ ನೀರಿನ ಹೊರಹರಿವು ಹೆಚ್ಚಾಗಿದೆ. ಆಲಮಟ್ಟಿ ಜಲಾಶಯವೂ ತುಂಬುವ ಹಂತಕ್ಕೆ ಬಂದಿದೆ. ಲಿಂಗನಮಕ್ಕಿ ಡ್ಯಾಂನಲ್ಲಿಯೂ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.
ನಿನ್ನೆ ಹಾಸನದಲ್ಲಿ ಮಳೆಯಿಂದಾಗಿ ರಾಮನಾಥಪುರದ ಜನವಸತಿ ಪ್ರದೇಶದವರೆಗೆ ನೀರು ನಿಂತಿತ್ತು. ಅನೇಕ ಕಡೆ ಭತ್ತದ ಬೆಳೆ ನೀರಿನಲ್ಲಿ ಜಲಾವೃತವಾಗಿತ್ತು. ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರದಿಂದ ನಿನ್ನೆ ಚಾರ್ಮಾಡಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿದಿತ್ತು. ಮೂಡಿಗೆರೆಯ ಬಣಕಲ್, ಕೊಟ್ಟಿಗೆಹಾರದ ಸುತ್ತಮುತ್ತ ಮಳೆ ಹೆಚ್ಚಾಗಿತ್ತು. ಇದರಿಂದ ತ್ರಿಪುರ ಗ್ರಾಮ ಪಂಚಾಯಿತಿಯಲ್ಲಿ ಮನೆಯೊಂದು ಕುಸಿದುಬಿದ್ದಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ