ಬೆಂಗಳೂರು (ಜ. 8): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೂರು ದಿನಗಳಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಶುರುವಾಗಿದೆ. ಪೂರ್ವ ಅಲೆಗಳ ಪರಿಣಾಮದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಅದರಲ್ಲೂ ಚಿಕ್ಕಮಗಳೂರು, ಹಾಸನ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಮತ್ತು ನಾಳೆ ಕರಾವಳಿ, ದಕ್ಷಿಣ ಒಳನಾಡಿನ ಮಳೆಯಾಗಲಿದೆ. ಹೀಗಾಗಿ, 7 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಜನವರಿ 10ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 2 ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಹಲವೆಡೆ ಇನ್ನೆರಡು ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 2 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇಂದು ಕೂಡ ಮಳೆಯ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Gold Rate Today: ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಚಿನ್ನದ ಬೆಲೆ ಹೀಗಿದೆ
ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಜ. 10ರವರೆಗೆ ಬೆಂಗಳೂರಿನಲ್ಲೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಜನವರಿ 10ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು, ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿತ್ತು. ದಕ್ಷಿಣ ಕನ್ನಡದ ಬೆಳ್ತಂಗಡಿ, ವಿಟ್ಲ, ಸುಳ್ಯ, ಪುತ್ತೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗಿದೆ. ಹಾಗೇ, ಕಾರ್ಕಳ, ಉಡುಪಿ, ಬ್ರಹ್ಮಾವರ, ಕುಂದಾಪುರದಲ್ಲೂ ಮಳೆಯ ಅಬ್ಬರ ಜೋರಾಗಿತ್ತು. ಜೊತೆಗೆ ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ವಿಜಯಪುರದಲ್ಲೂ ಮಳೆಯ ಅಬ್ಬರ ಜೋರಾಗಿತ್ತು. ರಾಜ್ಯಾದ್ಯಂತ ಹಲವೆಡೆ ಇನ್ನೂ 3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.