Karnataka Weather Today: ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯ ಆರ್ಭಟ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today:ಬೆಂಗಳೂರು(ಸೆ.02): ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇನ್ನೂ 4 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಸೆಪ್ಟೆಂಬರ್ 5ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೆ.5ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಲವಡೆ ವರುಣ ತನ್ನ ಆರ್ಭಟ ತೋರಿದ್ದಾನೆ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಜಯನಗರ, ಚಾಮರಾಜಪೇಟೆ, ಜೆ.ಪಿ.ನಗರ. ಮಹದೇವಪುರ, ಕೋರಮಂಗಲ, ವೈಟ್​ಫೀಲ್ಡ್​​, ವಿಜಯನಗರ, ಬನಶಂಕರಿ, ಕತ್ತಿಗುಪ್ಪೆ, ಬಸವನಗುಡಿ, ಹನುಮಂತನಗರ ಇನ್ನೂ ಮೊದಲಾದ ಕಡೆಗಳಲ್ಲಿ ಬುಧವಾರ ಭಾರೀ ಮಳೆ ಸುರಿದಿದೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:Astrology: ವೃಷಭ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಾಗಮನ: ಉಳಿದ 12 ರಾಶಿಗಳ ದಿನಭವಿಷ್ಯ ಹೀಗಿದೆ

ಇನ್ನು, ಕರಾವಳಿ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಸೆ.3ರಿಂದ 5ವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂಬ ಮಾಹಿತಿ ಲಭಿಸಿದೆ. ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಅದೇ ರೀತಿ ಕರ್ನಾಟಕ ಮಾತ್ರವದಲ್ಲೇ ಗುಜರಾತ್, ಬಿಹಾರ, ಮಧ್ಯಪ್ರದೇಶ ಉತ್ತರಾಖಂಡ ರಾಜ್ಯಗಳಲ್ಲೂ ಇಂದು ಭಾರೀ ಮಳೆಯಾಗಲಿದೆ. ಅಂತೆಯೇ ತೆಲಂಗಾಣ, ವಿದರ್ಭ, ಛತ್ತೀಸ್​ಗಢ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ, ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:Happy Birthday Kichcha Sudeep: ಸುದೀಪ್​ಗೆ ನೇರವಾಗಿ ಶುಭ ಕೋರುವ ಅವಕಾಶ ಇಲ್ಲಿದೆ..!

ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದರು.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದರು. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿದ್ದವು. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.
Published by:Latha CG
First published: