Karnataka Weather Today: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್​

ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್​ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್​ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ

  • Share this:
Karnataka Rains Today:ಬೆಂಗಳೂರು(ಸೆ.17): ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು(Karnataka Monsoon 2021), ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ(Coastal Districts ) ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್(Yellow Alert ) ಘೋಷಣೆ ಮಾಡಲಾಗಿದೆ. ಜೊತೆಗೆ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ , ಹಾಸನ ಭಾಗಗಳಲ್ಲೂ ಅಧಿಕ ಮಳೆಯಾಗಲಿದೆ. ಇನ್ನು, ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಸೆ.18 ಮತ್ತು 19ರಂದು ಸಹ ಮಳೆ ಮುಂದುವರೆಯಲಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು, ಉತ್ತರ ಮತ್ತು ನೈರುತ್ಯ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:Sourav Ganguly- ವಿರಾಟ್ ಕೊಹ್ಲಿ ಟಿ20 ಕ್ಯಾಪ್ಟನ್ಸಿ ವಿದಾಯಕ್ಕೆ ಸೌರವ್ ಗಂಗೂಲಿ ಪ್ರತಿಕ್ರಿಯೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಇಂದು ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಸೃಷ್ಟಿಯಾಗಲಿದ್ದು, ಇದರ ಪ್ರಭಾವದಿಂದಾಗಿ ಶನಿವಾರ ಮತ್ತು ಭಾನುವಾರ(ಸೆ.18 ಮತ್ತು 19ರಂದು) ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಇಂದಿನಿಂದ ಮೂರು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್​ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್​ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತದ ತೀವ್ರ ಪ್ರಭಾವದಿಂದಾಗಿ ಗುಜರಾತ್‌ನಲ್ಲಿ ಭಾನುವಾರದಿಂದಲೂ ಭಾರೀ ಮಳೆಯಾಗುತ್ತಿದ್ದು, ರಾಜ್‌ಕೋಟ್ ಹಾಗೂ ಜಮ್ನಾ ನಗರದಲ್ಲಿ ಅತ್ಯಧಿಕ ಮಳೆಯಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಸುಮಾರು ಏಳು ಸಾವಿರ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹದಿಂದಾಗಿ ಪ್ರಮುಖ ರಸ್ತೆಗಳು, ಗ್ರಾಮಗಳು ಜಲಾವೃತವಾಗಿವೆ. ಇಂದು ಮತ್ತು ನಾಳೆ ಗುಜರಾತ್​ನ ಅನೇಕ ಪ್ರದೇಶಗಳಲ್ಲಿ ಮಳೆ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಜರಾತ್ ಹಾಗೂ ಮಧ್ಯ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದರು.

ಇದನ್ನೂ ಓದಿ:Vaccine Drive: ನಾಳೆ ವಿಶೇಷ ಮಹಾ ಲಸಿಕೆ ಅಭಿಯಾನ; ಬೆಂಗಳೂರಿನಲ್ಲಿ ಒಂದೇ ದಿನ 5 ಲಕ್ಷ ಡೋಸ್ ಹಂಚಿಕೆ ಗುರಿ

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದರು. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿದ್ದವು. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.
Published by:Latha CG
First published: