Karnataka Weather Today: ಮಲೆನಾಡು, ಕರಾವಳಿಯಲ್ಲಿ ಮಳೆಯ ಆರ್ಭಟ; ಇನ್ನು 3 ದಿನ ಆರೆಂಜ್ ಅಲರ್ಟ್​

Karnataka Rain Updates: ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Monsoon Rain: ಬೆಂಗಳೂರು (ಜೂ. 15): ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರ್ನಾಟಕಕ್ಕೆ ದಟ್ಟ ಮಳೆಗಾಲ ಕಾಲಿಟ್ಟಿದ್ದು, ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ 2 ದಿನಗಳಿಂದ ಬಿಡದಂತೆ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇಂದಿನಿಂದ 3 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಅನೇಕ ಮನೆ, ರಸ್ತೆಗಳು ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿ, ಸುಳ್ಯ, ಮೂಡಿಗೆರೆ, ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಮುಂತಾದ ಕಡೆ ಮಳೆ ಹೆಚ್ಚಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ಜೂನ್ 17ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17ರಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗದ ಹೊಸನಗರ, ಸಾಗರ, ತೀರ್ಥಹಳ್ಳಿ, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕೊಪ್ಪ, ಕಳಸ, ಶೃಂಗೇರಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮ ಟೆಲಿಫೋನ್ ಎಕ್ಸ್​ಚೇಂಜ್ ದಂಧೆ ಪತ್ತೆ; ಐವರನ್ನು ಬಂಧಿಸಿದ ಪೊಲೀಸರಿಗೆ 50 ಸಾವಿರ ರೂ. ಬಹುಮಾನ

ಕೊಡಗಿನಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಲೆನಾಡಿನಲ್ಲಿ ಈಗಲೇ ಮಳೆಯ ಅಬ್ಬರಕ್ಕೆ ಅನೇಕರ ತೋಟಗಳು ಕೊಚ್ಚಿಕೊಂಡು ಹೋಗಿವೆ. ದಕ್ಷಿಣ ಕನ್ನಡದ ಮುಲ್ಕಿಯಲ್ಲಿ ಮಳೆಯ ಅಬ್ಬರದಿಂದ ಮುರಿದ ಮರದ ರೆಂಬೆ ಕಡಿಯಲು ಹೋದವರೊಬ್ಬರು ಕರೆಂಟ್ ಶಾಕ್​ನಿಂದ ಸಾವನ್ನಪ್ಪಿರುವ ಘಟನೆಯೂ ನಡೆದಿದೆ. ಭಟ್ಕಳ, ಅಂಕೋಲ, ಕಾರವಾರ, ಶಿವಮೊಗ್ಗ, ಶಿರಸಿ ಭಾಗದಲ್ಲಿ ಮಳೆ ಹೆಚ್ಚಾಗಿದೆ.

ಉತ್ತರ ಒಳನಾಡಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ, ಉತ್ತರ ಒಳನಾಡಿನಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೊಳಿಕೋಡ್, ವಯನಾಡಿನಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇಂದು ಅಧಿಕ ಮಳೆಯಾಗಲಿದೆ.

ಇದನ್ನೂ ಓದಿ: Sanchari Vijay: ಹುಟ್ಟೂರಿನಲ್ಲಿ ನಡೆಯಲಿದೆ ಸಂಚಾರಿ ವಿಜಯ್ ಅಂತ್ಯಸಂಸ್ಕಾರ..!

ಕೇರಳ ರಾಜ್ಯದಲ್ಲೂ ಇಂದಿನಿಂದ 2 ದಿನ ಅಧಿಕ ಮಳೆಯಾಗಲಿದೆ. ಹೀಗಾಗಿ ಕೇರಳದ ಜಿಲ್ಲೆಗಳಾದ ಮಲಪ್ಪುರಂ, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಇಂದು ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈರುತ್ಯ ಮಾನ್ಸೂನ್​ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ 1 ವಾರ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
Published by:Sushma Chakre
First published: