ಬೆಂಗಳೂರು (ಜೂನ್ 25): ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರಿಸಿ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿತ್ತು. ಆದರೆ, ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿತ್ತು. ಇದೀಗ ಇಂದಿನಿಂದ ಮತ್ತೆ ಕರಾವಳಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂನ್ 28ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: Hampi: ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ಹಂಪಿ ವೀಕ್ಷಣೆಗೆ ಪ್ರವಾಸಿಗರ ದಂಡು; ಆನ್ಲೈನ್ನಲ್ಲೂ ಟಿಕೆಟ್ ಲಭ್ಯ
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಿನ್ನೆ ಕೂಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯಲಿದೆ. ಬಳಿಕ ಸಂಜೆಯ ನಂತರ ಮತ್ತೆ ಮಳೆ ಆರಂಭವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ