Karnataka Rains Today: ಬೆಂಗಳೂರು(ಜು.24): ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರವಾಗಿದೆ. ಕಳೆದ ಹತ್ತು ದಿನಗಳಿಂದ ರಾಜ್ಯದ ಹಲವೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಮನೆಗಳು ಕುಸಿದಿವೆ. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿವೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಕರ್ನಾಟಕದಲ್ಲಿ ಮಳೆರಾಯನ ಆರ್ಭಟಕ್ಕೆ ಕಳೆದ 24 ಗಂಟೆಯಲ್ಲಿ ಮೂರು ಮಂದಿ ಬಲಿಯಾಗಿದ್ದಾರೆ. ಒಟ್ಟು 8 ಕಡೆ ಭೂ ಕುಸಿತ ಸಂಭವಿಸಿದೆ. ಸುಮಾರು 9 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.
ಭಾರೀ ಮಳೆಯಿಂದಾಗಿ ರೈಲು ಸಂಚಾರದಲ್ಲೂ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿರುವ ಹಿನ್ನೆಲೆ, ರೈಲು ಸಂಚಾರವನ್ನು ರದ್ದು ಮಾಡಲಾಗಿದೆ. ಸೋನಾಲಿಯಮ್-ಕುಲೇಮ್ ಮತ್ತು ಧೂದ್ಸಾಗರ್-ಕಾರಾಂಜಲ್ ಮಾರ್ಗದ ರೈಲುಗಳನ್ನು ಕ್ಯಾನ್ಸಲ್ ಮಾಡಲಾಗಿದೆ.
ಇದನ್ನೂ ಓದಿ:ಧಾರಾಕಾರ ಮಳೆಗೆ ಕೊಡಗು ಜಿಲ್ಲೆ ತತ್ತರ: ಮಣ್ಣು ಕುಸಿದು ರಸ್ತೆಗಳು ಬಂದ್!
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ಕೃಷ್ಣಾ, ಕಾವೇರಿ, ತುಂಗಭದ್ರಾ, ಭೀಮಾ, ಕಪಿಲಾ(ಕಬಿನಿ) ಹಾಗೂ ಇನ್ನೂ ಮೊದಲಾದ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ಸುಮಾರು 131 ಗ್ರಾಮಗಳು, 18 ತಾಲೂಕುಗಳು, 16,213 ಜನರು ಪ್ರವಾಹ ಭೀತಿಯನ್ನು ಎದುರಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಸಂಬಂಧಿತ ಪರಿಸ್ಥಿತಿ ಪರಿಶೀಲನೆ ನಡೆಸಿದರು. ಜೊತೆಗೆ ಜಿಲ್ಲಾಧಿಕಾರಿಗಳ ಜೊತೆ ಮಳೆಯ ಹೊಡೆತಕ್ಕೆ ಸಿಲುಕಿರುವ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದಾಗಿ ಹೇಳಿದ್ದಾರೆ. ಮಳೆಯಿಂದಾಗಿ ಸಂಕಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರವು ಎಲ್ಲಾ ಅತ್ಯಗತ್ಯ ಸಹಾಯವನ್ನು ಮಾಡುತ್ತದೆ ಎಂದು ಬಿಎಸ್ವೈ ಹೇಳಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆ ಇರುವುದರಿಂದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಆಯಾ ಜಿಲ್ಲೆಗಳ ಮತ್ತು ಕ್ಷೇತ್ರಗಳ ಜವಾಬ್ದಾರಿಯನ್ನು ನೋಡಿಕೊಳ್ಳುವುದರ ಜೊತೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಶುಕ್ರವಾರ ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಮುಂದಿನ 24 ಗಂಟೆಗಳಲ್ಲಿ ಈ ಮೇಲ್ಕಂಡ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಈ 2 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:ಭಾರತವೇ ತರಲಿದೆ ಡಿಜಿಟಲ್ ಕರೆನ್ಸಿ : ಶೀಘ್ರದಲ್ಲೇ ಪ್ರಾಯೋಗಿಕ ಪರೀಕ್ಷೆ
ಭಾರೀ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿವೆ. 21 ಮನೆಗಳು ಮಳೆಗೆ ಕುಸಿದಿದ್ದರೆ, 804 ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿವೆ. ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಬೈಲ್ ಘಾಟ್ ಸೇರಿದಂತೆ 8 ಕಡೆ ಭೂಕುಸಿತ ಸಂಭವಿಸಿದೆ.
ಇನ್ನು, 65 ಸೇತುವೆಗಳು, 10 ಶಾಲೆಗಳು ಹಾಗೂ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮಳೆಯ ಹೊಡೆತಕ್ಕೆ ಸಿಕ್ಕಿ ಹಾನಿಯಾಗಿವೆ. ಸುಮಾರು 291.03 ಕಿ.ಮೀ ಉದ್ದದ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ. ರಾಜ್ಯದಲ್ಲಿ ಸುಮಾರು 80 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಅಲ್ಲಿ 4,964 ಮಂದಿ ವಾಸಿಸುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ